ಅರಸೀಕೆರೆ: ಕನ್ನಡ ಕಟ್ಟುವ ಕಾಯಕವೇ ನಮ್ಮ ಮೊದಲ ಧ್ಯೇಯ ಮತ್ತು ಆದ್ಯತೆಯಾಗಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಉಪ್ಪಾರ್ ಹೇಳಿದರು.
ನಗರದ ವೆಂಕಟೇಶ್ವರ ಕಲಾ ಭವನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಗೀತ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕನ್ನಡ ಭಾಷೆಯ ಶ್ರೀಮಂತಿಕೆಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವುದು ಪ್ರಸಕ್ತ ಸನ್ನಿವೇಶದಲ್ಲಿ ಅತ್ಯಗತ್ಯವಾಗಿದೆ. ಇದನ್ನು ಮನಗಂಡು ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ತಂಡ ರಚಿಸಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ನೂತನ ಪದಾಧಿಕಾರಿಗಳು ಹೊಣೆಗಾರಿಕೆ ಅರಿತು ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಶಾಸಕ ಕೆ.ಎಂ.ಶಿವಲಿಂಗೇಗೌಡ, ನಗರಸಭೆ ಅಧ್ಯಕ್ಷ ಸಿ.ಗಿರೀಶ್, ಪತ್ರಕರ್ತ ರವಿ ನಾಕಲಗೂಡು, ಪದಾಧಿಕಾರಿಗಳಾದ ಗಂಗಮ್ಮ, ಕೆ.ಎಸ್.ಮಂಜುನಾಥ್, ಬಸವರಾಜು, ಬಿ.ಪರಮೇಶ್, ಅರುಣ್‌ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಸನ್ಮಾನಿಸಲಾಯಿತು. ಗಾಯಕ ಕಂಬದ ರಂಗಯ್ಯ ಹಾಗೂ ಸ್ಥಳೀಯ ಕಲಾವಿದರು ಹಳೆಯ ಚಲನಚಿತ್ರಗೀತೆಗಳನ್ನು ಹಾಡಿ ಪ್ರೇಕ್ಷಕರನ್ನು ರಂಜಿಸಿದರು.