ಚಿತ್ರದುರ್ಗ: ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾಗುವ ಜಿಲ್ಲೆಯ ಪಿಯು ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕನ್ನಡ ಮಾಧ್ಯಮದಲ್ಲಿ ಪಿಯು ವಿಜ್ಞಾನ ಬೋಧಿಸುವ ವಿಭಾಗವನ್ನು ಪ್ರತ್ಯೇಕವಾಗಿ ಪ್ರಾರಂಭಿಸುವಂತೆ ಡಿಸಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಪಿಯು ವಿಜ್ಞಾನ ಕನ್ನಡದಲ್ಲಿ ಬೋಧಿಸುವ ಕುರಿತ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆ ಸಭೆಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 1ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ತಕ್ಷಣ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಯುವುದು ಕಷ್ಟವಾಗಲಿದೆ. ಹಾಗಾಗಿ ಜಿಲ್ಲೆಯ ಕೆಲವು ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕವಾಗಿ ಪಿಯು ವಿಜ್ಞಾನ ಕನ್ನಡ ಬೋಧನೆಗೆ ಪ್ರತ್ಯೇಕ ವಿಭಾಗ ಪ್ರಾರಂಭಿಸದರೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಪಿಯು ವಿಜ್ಞಾನ, ಸಿಇಟಿ, ನೀಟ್ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯುವ ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರವೇ ಪಿಯು ವಿಜ್ಞಾನ ಪಠ್ಯಪುಸ್ತಕಗಳನ್ನು ಕನ್ನಡದಲ್ಲಿ ಮುದ್ರಿಸಿ ಎಲ್ಲ ಪಿಯು ಕಾಲೇಜುಗಳಿಗೆ ಪೂರೈಕೆ ಮಾಡಿದೆ. ಪಿಯು ವಿಜ್ಞಾನ ಕನ್ನಡ ಮಾಧ್ಯಮಕ್ಕೆ ಪ್ರವೇಶ, ಪೋಷಕರ ಪ್ರತಿ ಕ್ರಿಯೆ, ಉಪನ್ಯಾಸಕರ ಅಭಿಪ್ರಾಯ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಭಾಷಾ ವಿಷಯ ಪರಿಣಾಮಕಾರಿಯಾಗಿ ಕಲಿಸಿ: ಶಿಕ್ಷಕರು,ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಭಾಷಾ ವಿಷಯಗಳನ್ನು ಪರಿಣಾಮಕಾರಿಯಾಗಿ ಕಲಿಸಬೇಕು. ಭಾಷೆ ಮೇಲೆ ಹಿಡಿತ ಸಾಧಿಸಿದರೆ ವಿದ್ಯಾರ್ಥಿಗಳು ಸುಲಭವಾಗಿ ಐಚ್ಛಿಕ ವಿಷಯಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿದೆ. ಹಾಗಾಗಿ ಭಾಷಾ ವಿಷಯಗಳನ್ನು ಕಡ್ಡಾಯವಾಗಿ, ಪರಿಣಾಮಕಾರಿಯಾಗಿ ಕಲಿಸಬೇಕೆಂದು ತಾಕೀತು ಮಾಡಿದರು.
ಪಿಯು ಫಲಿತಾಂಶದಲ್ಲಿ ಅಗ್ರಸ್ಥಾನ ಪಡೆಯುವುದಕ್ಕಿಂತ ಮುಖ್ಯವಾಗಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲೆಯಲ್ಲಿ ಪಿಯು ಪಾಸಾದ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ, ಕೆಎಎಸ್, ಐಎಎಸ್ ಸೇರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುವುದು ಮುಖ್ಯ ವಾಗಬೇಕು ಎಂದರು.
ಪಿಯು ವಿಜ್ಞಾನ ಕನ್ನಡದಲ್ಲಿ ಬೋಧನೆ ಕುರಿತಂತೆ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಸಾಧಕ-ಬಾಧಕಗಳ ಕುರಿತು ಡಿಸಿಗೆ ಮಾಹಿತಿ ನೀಡಿದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ,ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್. ಪುಟ್ಟಸ್ವಾಮಿ, ಪ್ರಭಾರ ಡಿಡಿಪಿಐ ಎಂ. ನಾಸೀರುದ್ದೀನ್, ಅನ್ನದ ಭಾಷೆಯಾಗಿ ಕನ್ನಡ ವೇದಿಕೆಯ ಚಿಕ್ಕಪ್ಪನಹಳ್ಳಿ ಷಣ್ಮುಖ ಮತ್ತಿತರರು ಇದ್ದರು.