ಜಿಲ್ಲೆ

ಕನ್ನಡ ಶಾಲೆಗಳ ಸಬಲೀಕರಣಕ್ಕೆ ಒತ್ತು ನೀಡಿ, ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ

 : ರಾಜ್ಯದಲ್ಲಿ ಕನ್ನಡ ಶಾಲೆಗಳ ಸಬಲೀಕರಣಕ್ಕೆ ಒತ್ತು ನೀಡುವಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಮನವಿ ಮಾಡಿದರು.

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ನ ಕಚೇರಿಯಲ್ಲಿ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರನ್ನು ಸನ್ಮಾನಿಸಿ ಮಾತನಾಡಿದರು.

ರಾಜ್ಯಾದ್ಯಂತ ಕನ್ನಡ ಶಾಲೆಗಳು ದುಸ್ಥಿತಿಯಲ್ಲಿವೆ. ಆದ್ದರಿಂದ, ಅವುಗಳ ಪುನರುತ್ಥಾನಕ್ಕೆ ಕನ್ನಡ ಸಾಹಿತ್ಯ ಪರಿಷತ್‌ನಿಂದ ಪೂರಕವಾದ ಚಟುವಟಿಕೆ ಹಮ್ಮಿಕೊಳ್ಳುವಂತೆ ಕೋರಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಗಿ ಮಾತನಾಡಿ, ಸಾಹಿತ್ಯ ಪರಿಷತ್ತಿನೊಂದಿಗೆ ಶಿಕ್ಷಕರ ಸಂಘದ ಪ್ರತಿನಿಧಿಗಳು ಸದಾ ಒಡನಾಟ ಇಟ್ಟುಕೊಂಡಿದ್ದಾರೆ. ಪರಿಷತ್ತಿನ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಪಾಲ್ಗೊಳ್ಳುತ್ತಾರೆ. ಆದ್ದರಿಂದ, ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಕಸಾಪ ಸಮಿತಿಗಳಲ್ಲಿ ಹಾಗೂ ಕಾರ್ಯಕಾರಿ ಸಮಿತಿಯಲ್ಲಿ ಶಿಕ್ಷಕರಿಗೆ ಪ್ರಾತಿನಿಧ್ಯ ಕೊಡಬೇಕು. ಇದರಿಂದ ಕನ್ನಡದ ಕೆಲಸಗಳಲ್ಲಿ ಇನ್ನಷ್ಟು ಕ್ರಿಯಾಶೀಲವಾಗಿ ಪಾಲ್ಗೊಳ್ಳಲು ಪ್ರೇರಣೆ ದೊರೆಯುತ್ತದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಮಹೇಶ್ ಜೋಶಿ, ರಾಜ್ಯದಲ್ಲಿ ಕನ್ನಡ ಭಾಷೆ ಉಳಿಯಲು ಪ್ರಾಥಮಿಕ ಶಿಕ್ಷಕರ ಕೊಡುಗೆ ಅಪಾರವಾಗಿದೆ. ಹಾಗಾಗಿ ಕಸಾಪ ಸದಾ ಶಿಕ್ಷಕರ ಸಂಘಟನೆ ಜತೆ ನಿಲ್ಲುತ್ತದೆ ಎಂದು ಹೇಳಿದರು.