ಚಾಮರಾಜನಗರ: ತಾಲೂಕಿನ ವೀರನಪುರ ಗ್ರಾಮದಲ್ಲಿ ಗಣಿ ಲಾರಿ ಮಾಲೀಕರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಅಧಿಕ ಭಾರ ಹೊತ್ತು ಸಂಚರಿಸುವ ಕ್ರಷರ್ ಮತ್ತು ಗಣಿಗಾರಿಕೆ ಲಾರಿಗಳಿಂದ ಗ್ರಾಮದ ರಸ್ತೆಗಳು ಹಾಳಾಗುತ್ತಿವೆ. ಕುಡಿಯುವ ನೀರಿನ ಪೈಪ್‌ಲೈನ್ ಹೊಡೆದು ಕಲುಷಿತ ನೀರು ಮನೆಗಳಿಗೆ ಸರಬರಾಜು ಆಗುತ್ತಿದೆ. ರಸ್ತೆಯ ಬದಿಯಲ್ಲಿರುವ ಮನೆಗಳಿಗೆ ಧೂಳು ನುಗ್ಗುತ್ತಿದ್ದು, ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಗ್ರಾಮದ ಜನರ ಹಿತದೃಷ್ಟಿಯಿಂದ ಅಧಿಕ ಭಾರಹೊತ್ತು ಸಂಚರಿಸುವ ಕ್ರಷರ್ ಮತ್ತು ಗಣಿಗಾರಿಕೆ ಲಾರಿಗಳ ಮಾಲೀಕರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದ ಒತ್ತಾಯಿಸಿದರು.
ಜಿಲ್ಲಾ ಕಾರ್ಯಾಧ್ಯಕ್ಷ ಉಡಿಗಾಲ ರೇವಣ್ಣ, ಉಪಾಧ್ಯಕ್ಷ ಪಟೇಲ್ ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಮೂಕಳ್ಳಿ ಮಹದೇವಸ್ವಾಮಿ, ತಾಲೂಕು ಅಧ್ಯಕ್ಷ ಸತೀಶ್, ಪ್ರಧಾನ ಕಾರ್ಯದರ್ಶಿ ಸಿ.ಸುಂದ್ರಪ್ಪ, ಉಪಾಧ್ಯಕ್ಷ ಶಿವಸ್ವಾಮಿ, ಗ್ರಾಮ ಘಟಕ ಅಧ್ಯಕ್ಷ ಲೋಕೇಶ್ ಹಾಗೂ ಪದಾಧಿಕಾರಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.