- ಯಳಂದೂರು: ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಬುಧವಾರ ಸೆಸ್ಕ್ ಸಿಬ್ಬಂದಿ ವಿದ್ಯುತ್ ಬಿಲ್ ನೀಡಲು ಮನೆಗಳಿಗೆ ತೆರಳಿದ ಸಮಯದಲ್ಲಿ ಗ್ರಾಮಸ್ಥರು ಹಾಗೂ ರೈತ ಸಂಘದ ಸದಸ್ಯರು ಬಿಲ್ ನೀಡದಂತೆ ಆಗ್ರಹಿಸಿ ಪ್ರತಿಭಟಿಸಿದರು.
ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೂ 200 ಯೂನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡುವ ಭರಸವೆ ನೀಡಿದ್ದಾರೆ. ಹಾಗಾಗಿ ನಾವು ಬಿಲ್ ಕಟ್ಟುವುದಿಲ್ಲ ಎಂದರು.
ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಅದರಂತೆ, ಪಕ್ಷದ ರಾಷ್ಟ್ರ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನುಡಿದಂತೆ ಈ ಯೋಜನೆಯನ್ನು ತಕ್ಷಣ ಜಾರಿಗೆ ತರಬೇಕು. ಸೆಸ್ಕ್ ಸಿಬ್ಬಂದಿ ಬಿಲ್ ನೀಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.