ಮೂಡಲಗಿಯ ಈರಣ್ಣ ದೇವಸ್ಥಾನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು. ಎಂಎಲ್‌ಸಿ ಮಹಾಂತೇಶ ಕವಟಗಿಮಠ, ಅಶೋಕ ದುಡಗುಂಟಿ ಇತರರಿದ್ದರು. 
ಜಿಲ್ಲೆ

ಕರೊನಾ ನಿಯಂತ್ರಣಕ್ಕಾಗಿ ಎಲ್ಲರೂ ಹೋರಾಡೋಣ

ಮೂಡಲಗಿ: ಮೂಡಲಗಿ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಬೆಡ್‌ಗಳ ಸಂಖ್ಯೆ ಹೆಚ್ಚಿಸುವಂತೆ ಸರ್ಕಾರಕ್ಕೆ ಕೋರಲಾಗಿದೆ. ಕೋವಿಡ್-19 ನಿಯಂತ್ರಣಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಪಟ್ಟಣದ ಈರಣ್ಣ ದೇವಸ್ಥಾನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕೋವಿಡ್-19 ಟಾಸ್ಕ್‌ಫೋರ್ಸ್ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಕರೊನಾ ಹರಡುವಿಕೆ ನಿಯಂತ್ರಣಕ್ಕಾಗಿ ಪ್ರತಿಯೊಬ್ಬರೂ ಕಟ್ಟುನಿಟ್ಟಾಗಿ ಮಾರ್ಗಸೂಚಿ ಪಾಲಿಸಬೇಕು ಎಂದರು.

ನಿಧಿ ಬಳಕೆಗೆ ನಿರ್ಧಾರ: ಸೋಂಕಿತರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಬೇಕು. ಕೋವಿಡ್ 3ನೇ ಅಲೆ ನಿಯಂತ್ರಣಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯನ್ನು ಕೋವಿಡ್‌ಗಾಗಿ ಬಳಸಲು ನಿರ್ಧರಿಸಲಾಗಿದೆ. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಆಂಬುಲೆನ್ಸ್ ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಎನ್‌ಜಿಒಗಳ ಮೂಲಕ ಚಾಲಕರನ್ನು ನಿಯೋಜಿಸಲಾಗುತ್ತಿದೆ. ಅವರಿಗೆ ವೇತನವನ್ನೂ ನಿಗದಿ ಪಡಿಸಲಾಗಿದೆ ಎಂದರು.

ಆಕ್ಸಿಜನ್ ಪ್ಲಾಂಟ್: ಗೋಕಾಕದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದೆ. ಕೋವಿಡ್ 2ನೇ ಅಲೆ ನಿಯಂತ್ರಣಕ್ಕಾಗಿ ಶ್ರಮವಹಿಸಿ ದುಡಿಯುತ್ತಿರುವ, ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತಿರುವ ಕರೊನಾ ಸೇನಾನಿಗಳ ಕಾರ್ಯ ಶ್ಲಾಘನೀಯ.

ಕೋವಿಡ್ ವಿರುದ್ಧ ಸೆಣಸಲು 18 ವರ್ಷ ಮೇಲ್ಪಟ್ಟವರು ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಸಲಹೆ ನೀಡಿದರು.

ಎಲ್ಲರೂ ಕೈಜೋಡಿಸಿ: ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂಲಸೌಕರ್ಯ ಕೊರತೆ ಹೆಚ್ಚಿದೆ. ಅವುಗಳನ್ನು ನೀಗಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ.

ಶಿಥಿಲಗೊಂಡ ಆಸ್ಪತ್ರೆ ಹಳೇ ಕಟ್ಟಡಗಳನ್ನು ನವೀಕರಣಗೊಳಿಸಿ, ಸೋಂಕಿತರಿಗೆ ಆಕ್ಸಿಜನ್ ಸೌಲಭ್ಯ ಒದಗಿಸಿದ್ದಾರೆ. ಕರೊನಾ ನಿಯಂತ್ರಣಕ್ಕಾಗಿ ಸರ್ಕಾರದೊಂದಿಗೆ ಎಲ್ಲರೂ ಕೈಜೋಡಿಸಬೇಕಿದೆ. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಾನೂ ಸಹ ಒಂದು ಆಂಬುಲೆನ್ಸ್ ನೀಡುತ್ತೇನೆ ಎಂದರು.
ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಬೈಲಹೊಂಗಲ ಉಪವಿಭಾಗಾಧಿಕಾರಿ ಡಾ.ಶಶಿಧರ ಬಗಲಿ, ಗೋಕಾಕ ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಮೂಡಲಗಿ ತಹಸೀಲ್ದಾರ್ ಡಿ.ಜೆ. ಮಹಾತ್, ತಾಲೂಕು ಆರೋಗ್ಯಾಧಿಕಾರಿ ಡಾ. ಮುತ್ತಣ್ಣ ಕೊಪ್ಪದ, ಡಾ.ಆರ್.ಎಸ್. ಬೆಣಚಿನಮರಡಿ, ಗೋಕಾಕ ಸರ್ಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ್, ಡಾ.ಭಾರತಿ ಕೋಣಿ, ಬಿಇಒ
ಅಜಿತ ಮನ್ನಿಕೇರಿ ಇತರರಿದ್ದರು.

ತುರ್ತು ಸಂದರ್ಭ ರೋಗಿಗಳ ಚಿಕಿತ್ಸೆಗೆ ಅನುಕೂಲವಾಗಲೆಂದು ಮೂಡಲಗಿ, ಕುಲಗೋಡ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಎರಡು ಆಂಬುಲೆನ್ಸ್ ಒದಗಿಸಲಾಗಿದೆ. ಅರಬಾವಿ ಕ್ಷೇತ್ರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಶೀಘ್ರ ಏಳು ಆಂಬುಲೆನ್ಸ್ ಒದಗಿಸಲಾಗುವುದು.| ಬಾಲಚಂದ್ರ ಜಾರಕಿಹೊಳಿ ಶಾಸಕ, ಅರಬಾವಿ