ಜಿಲ್ಲೆ

ಕರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

ಅಧಿಕಾರಿಗಳಿಗೆ ತಾಪಂ ಉಪಾಧ್ಯಕ್ಷ ಬೆಕ್ಕಳಲೆ ರಘು ಸೂಚನೆ

ಮದ್ದೂರು: ಪಟ್ಟಣ ಹಾಗೂ ತಾಲೂಕಿನ ಹಲವಾರು ಹಳ್ಳಿಗಳಲ್ಲಿ ಕರೊನಾ ಸೋಂಕಿನ ಪ್ರಕರಣಗಳು ಕಂಡುಬಂದಿರುವುದರಿಂದ ಜನರು ಆತಂಕ್ಕೊಳಗಾಗಿದ್ದು, ಸೋಂಕಿನ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬೆಕ್ಕಳಲೆ ರಘು ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಅಧ್ಯಕ್ಷೆ ಜಯಲಕ್ಷ್ಮಮ್ಮ ಅಧ್ಯಕ್ಷತೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಅಧಿಕಾರಿಗಳ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಗಳಿಗೆ ಗುಣಮಟ್ಟದ ಆಹಾರ, ಪ್ರತ್ಯೇಕ ಶೌಚಗೃಹ ಹಾಗೂ ಯಾವುದೇ ಮೂಲಸೌಕರ್ಯ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕರೊನಾ ತಡೆಗೆ ಸರ್ಕಾರದ ಮಾರ್ಗಸೂಚಿ ಅನುಸರಿಸುವಂತೆ ಜನರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್ ಮಾತನಾಡಿ, ಕಾರ್ಖಾನೆಗಳಲ್ಲಿ ಕಾರ್ಮಿಕರಿಗೆ ಕರೊನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಮೂಲಸೌಕರ್ಯ ನೀಡುತ್ತಿಲ್ಲ. ಸಮರ್ಪಕವಾಗಿ ಮಾಸ್ಕ್, ಸ್ಯಾನಿಟೈಸರ್ ನೀಡುತ್ತಿಲ್ಲ ಹಾಗೂ ಪರಸ್ಪರ ಅಂತರ ಕಾಯ್ದುಕೊಳ್ಳದೆ ಕೆಲಸ ಮಾಡುತ್ತಿದ್ದಾರೆ. ಇದರಿಂದ ಸೋಂಕಿನ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ. ಈ ಸಂಬಂಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ಕಾರ್ಮಿಕರ ಇಲಾಖೆಯ ತಾಲೂಕು ಅಧಿಕಾರಿ ಕಲ್ಪನಾ ಅವರನ್ನು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಕಲ್ಪನಾ, ಕಾರ್ಖಾನೆಗಳಿಗೆ ದಿಢೀರ್ ಭೇಟಿ ನೀಡಿ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ಒದಗಿಸುವಂತೆ ಕಾರ್ಖಾನೆಯ ಆಡಳಿತ ಮಂಡಳಿಗೆ ಸೂಚಿಸಲಾಗುವುದು ಎಂದು ಹೇಳಿದರು.
ತಾಪಂ ಇಒ ಮುನಿರಾಜ ಮಾತನಾಡಿ, ಆಯುಷ್ ಇಲಾಖೆಯಿಂದ ರೋಗನಿರೋಧಕ ಶಕ್ತಿ ಹೆಚ್ಚಿಸುವ ಔಷಧಗಳು ಬಂದಿವೆ. ಸಾರ್ವಜನಿಕರಿಗೆ ತಲುಪಿಸುವ ಕೆಲಸ ಮಾಡಬೇಕು. ಈ ಬಗೆ ಹೆಚ್ಚಿನ ಪ್ರಚಾರ ಮಾಡಿ ಜನರು ಇದನ್ನು ಬಳಕೆ ಮಾಡುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವಂತೆ ಮಾಡಬೇಕು ಎಂದು ಆಯುಷ್ ಅಧಿಕಾರಿಗೆ ತಿಳಿಸಿದರು.
ಆಯಷ್ ಇಲಾಖೆಯ ಅಧಿಕಾರಿ ಡಾ.ಭಾಗ್ಯಲಕ್ಷ್ಮೀ ಮಾತನಾಡಿ, ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ರೋಗನಿರೋಧಕ ಶಕ್ತಿ ಹೆಚ್ಚಿಸುವ ಔಷಧಗಳನ್ನು ಬಳಕೆ ಮಾಡುವಂತೆ ತಿಳಿಸಲಾಗುತ್ತಿದೆ ಎಂದರು.