ಚಿತ್ರದುರ್ಗ: ಮೂಲಸೌಲಭ್ಯ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹಿಸಿ ಸೆ. 26ರಂದು ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಕರ್ತವ್ಯಕ್ಕೆ ಗೈರಾಗಿ ರಾಜ್ಯಾದ್ಯಂತ ಮುಷ್ಕರ ಕೈಗೊಳ್ಳಲಾಗುವುದು ಎಂದು ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ಕೇಂದ್ರ ಸಂಘದ ಅಧ್ಯಕ್ಷ ಯೋಗೀಶ್ ನಾಯ್ಕ್ ತಿಳಿಸಿದರು.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಕ್ಷೇತ್ರಗಳಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳಿಗೆ ಯಾವುದೇ ರೀತಿಯ ಮೂಲಸೌಲಭ್ಯ ಇಲ್ಲ. ಕೆಲಸದ ಒತ್ತಡವೂ ಹೆಚ್ಚಾಗಿದೆ ಎಂದರು.
ಸರ್ಕಾರ ಯಾವ ಸೌಲಭ್ಯವನ್ನೂ ನೀಡುತ್ತಿಲ್ಲ. ನಿತ್ಯ ಬೆಳಗ್ಗೆ 6ರಿಂದ ರಾತ್ರಿ 8ರ ವರೆಗೂ ಒತ್ತಡದ ಕಾರ್ಯನಿರ್ವಹಣೆಯಿಂದಾಗಿ ಅಧಿಕಾರಿಗಳು ಸಾವು-ನೋವು ಅನುಭವಿಸುವಂತಾಗಿದೆ. ಹೀಗಾಗಿ ಸೌಲಭ್ಯ ಕಲ್ಪಿಸಲು ಈ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಸ್ಪಂದಿಸದಿದ್ದಲ್ಲಿ ಅನಿರ್ದಿಷ್ಟಾವಧಿ ಸತ್ಯಾಗ್ರಹಕ್ಕೂ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸಂಘದ ಉಪಾಧ್ಯಕ್ಷ ಹರೀಶ್, ಗೌರವಾಧ್ಯಕ್ಷ ಪಾಂಡುರಂಗಪ್ಪ, ಖಜಾಂಚಿ ರುದ್ರೇಶ್, ಶಿವಾನಂದ ನಾಯ್ಕ್, ರಘುಪತಿ, ಗಂಗಾಧರ್ ಇತರರಿದ್ದರು.