ಬೀದರ್: ಶೇ 40 ರಷ್ಟು ಫಿಟ್‍ಮೆಂಟ್ ಹಾಗೂ ಹಳೆಯ ಪಿಂಚಣಿ ಯೋಜನೆ ಜಾರಿ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಸ್ಪಂದಿಸದಿದ್ದರೆ ಪಶು ವೈದ್ಯರು ಮಾ. 1 ರಿಂದ ಕರ್ತವ್ಯಕ್ಕೆ ಗೈರು ಹಾಜರಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಕರ್ನಾಟಕ ಪಶು ವೈದ್ಯಕೀಯ ಸಂಘ ಎಚ್ಚರಿಕೆ ನೀಡಿದೆ.
ರಾಜ್ಯ ಸರ್ಕಾರಿ ನೌಕರರ ಸಂಘವು ಈಗಾಗಲೇ ಏಳನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು, 2022ರ ಜುಲೈ 1 ರಿಂದ ಅನ್ವಯವಾಗುವಂತೆ ಫಿಟ್‍ಮೆಂಟ್ ಜಾರಿಗೊಳಿಸಬೇಕು ಹಾಗೂ ರಾಜಸ್ತಾನ್, ಛತ್ತೀಸ್‍ಗಡ್, ಜಾರ್ಖಂಡ್, ಪಂಜಾಬ್ ಮತ್ತು ಹಿಮಾಚಲ್ ಪ್ರದೇಶಗಳ ಮಾದರಿಯಲ್ಲಿ ರಾಜ್ಯದಲ್ಲೂ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮಾ. 1 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದೆ ಎಂದು ಕರ್ನಾಟಕ ಪಶು ವೈದ್ಯಕೀಯ ಸಂಘದ ರಾಜ್ಯ ಅಧ್ಯಕ್ಷ ಡಾ. ಶಿವಶರಣಪ್ಪ ಜಿ. ಯಲಗೊಡ ತಿಳಿಸಿದ್ದಾರೆ.
ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಫೆ. 28 ರ ವರೆಗೆ ಕಾಲಾವಕಾಶ ನೀಡಲಾಗಿದೆ. ಬೇಡಿಕೆ ಈಡೇರಿಸದಿದ್ದರೆ, ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ಎಲ್ಲ ಅಧಿಕಾರಿ ವೃಂದದವರು ಕರ್ತವ್ಯಕ್ಕೆ ಗೈರು ಹಾಜರಾಗಿ, ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.