ಜಿಲ್ಲೆ

ಕರ್ನಾಟಕ ಜ್ಯೋತಿ ರಥಯಾತ್ರೆಗೆ ಅದ್ದೂರಿ ಸ್ವಾಗತ

ವಿಜೃಂಭಣೆಯ ಮೆರವಣಿಗೆ ಅನೇಕ ಗಣ್ಯರು ಭಾಗಿ ನಾಮಫಲಕದಲ್ಲಿ ಶೇ.60 ರಷ್ಟು ಕನ್ನಡ ಬಳಕೆ ಆದೇಶ ಪಾಲಿಸಲು ಶಾಸಕ ಪಪ್ಪಿ ಮನವಿ
ವಿಜಯವಾಣಿ ಸುದ್ದಿಜಾಲ ಚಿತ್ರದುರ್ಗ
‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಧ್ಯೇಯ ವಾಕ್ಯದೊಂದಿಗೆ ಕರ್ನಾಟಕ ಸಂಭ್ರಮ-50 ರ ಅಂಗವಾಗಿ ರಾಜ್ಯದಲ್ಲಿ ಸಂಚರಿಸುತ್ತಿರುವ ಕರ್ನಾಟಕ ಜ್ಯೋತಿ ರಥಯಾತ್ರೆ ಭವ್ಯ ಮೆರವಣಿಗೆ ನಗರದಲ್ಲಿ ಬುಧವಾರ ವಿಜೃಂಭಣೆಯಿಂದ ನೆರವೇರಿತು.
ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ತೋಟಗಾರಿಕೆ, ಕೃಷಿ, ಶಿಕ್ಷಣ ಇಲಾಖೆ ಅಧಿಕಾರಿ, ಸಿಬ್ಬಂದಿ ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ನಗರದ ಹೊಳಲ್ಕೆರೆ ರಸ್ತೆ ಕನಕವೃತ್ತದಲ್ಲಿ ಯಾತ್ರೆಯನ್ನು ಸ್ವಾಗತಿಸಿದ ಬಳಿಕ, ವಿವಿಧ ಜಾನಪದ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಿತು.
ತಾಯಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ ನೀಡಿದರು. ಕನಕ ವೃತ್ತದಿಂದ ಆರಂಭವಾದ ಮೆರವಣಿಗೆ ಸಂಗೊಳ್ಳಿ ರಾಯಣ್ಣ, ಗಾಂಧಿ, ಎಸ್‌ಬಿಐ, ಅಂಬೇಡ್ಕರ್, ಮದಕರಿ ನಾಯಕ ವೃತ್ತ ಮಾರ್ಗ ವೀರವನಿತೆ ಒನಕೆ ಓಬವ್ವ ವೃತ್ತಕ್ಕೆ ಆಗಮಿಸಿ ಸಮಾಪನಗೊಂಡಿತು.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಮಾತನಾಡಿ, ಮೈಸೂರು ರಾಜ್ಯ ಕರ್ನಾಟಕವೆಂದು ನಾಮಕರಣವಾಗಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಂಪಿಯಲ್ಲಿ ರಥಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು. ಈಗ ಜಿಲ್ಲೆಗೆ ಆಗಮಿಸಿರುವ ಯಾತ್ರೆಗೆ ವಿಜೃಂಭಣೆಯ ಸ್ವಾಗತ ದೊರಕಿದೆ. ಜಿಲ್ಲಾದ್ಯಂತ ಈ ಯಾತ್ರೆ ಜು.14ರ ವರೆಗೂ ಸಂಚರಿಸಲಿದೆ ಎಂದರು.
ಸರ್ಕಾರದ ಆದೇಶದಂತೆ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸುವುದು ಕಡ್ಡಾಯವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಡಳಿತ, ನಗರಸಭೆ ಸಹಯೋಗದಲ್ಲಿ ಈ ನಿಟ್ಟಿನಲ್ಲಿ ಸೂಕ್ತ ಕ್ರಮದ ಜವಾಬ್ದಾರಿ ನಮ್ಮದಾಗಿದೆ ಎಂದು ತಿಳಿಸಿದರು.
ಸಂಸದ ಗೋವಿಂದ ಎಂ.ಕಾರಜೋಳ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಎಎಸ್‌ಪಿ ಎಸ್.ಜೆ.ಕುಮಾರಸ್ವಾಮಿ, ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ, ಕೋಶಾಧ್ಯಕ್ಷ ಲೋಕೇಶ್, ತಾಲೂಕಾಧ್ಯಕ್ಷ ರಾಮಲಿಂಗಶೆಟ್ಟಿ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್, ತಹಸೀಲ್ದಾರ್ ಡಾ.ನಾಗವೇಣಿ, ನಗರಸಭೆ ವ್ಯವಸ್ಥಾಪಕಿ ಮಂಜುಳಾ, ಕಂದಾಯ ಅಧಿಕಾರಿ ಜಯಣ್ಣ, ಪ್ರಾಣೇಶ್, ಆರೋಗ್ಯಾಧಿಕಾರಿ ನಾಗರಾಜ, ಚಿತ್ರದುರ್ಗ ಬಿಇಒ ಎಸ್.ನಾಗಭೂಷಣ್, ಶಿಕ್ಷಣಾಧಿಕಾರಿ ಎನ್.ಆರ್.ತಿಪ್ಪೇಸ್ವಾಮಿ, ರಮೇಶ್, ಕೆ.ಟಿ.ಶಿವಕುಮಾರ್ ಮತ್ತಿತರರು ಇದ್ದರು.