ಮದ್ದೂರು: ತಾಲೂಕಿನ ಆತಗೂರು ಹೋಬಳಿ ಬ್ಯಾಲದಕೆರೆ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಒಬ್ಬ ಬಾಲಕ ಸೇರಿದಂತೆ 30 ಜನರು ಅಸ್ವಸ್ಥಗೊಂಡಿದ್ದಾರೆ.
ಅಸ್ವಸ್ಥಗೊಂಡಿರುವವರ ಪೈಕಿ 15 ಜನ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಶುಕ್ರವಾರ ಚಿಕಿತ್ಸೆ ಪಡೆದಿದ್ದಾರೆ. ಇಬ್ಬರು ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮದೇವತೆ ಜಾತ್ರೆ ಸಂದರ್ಭ ಇವರು ನೀರು, ಆಹಾರ ಸೇವಿಸಿದ್ದರಿಂದ ವಾಂತಿ, ಭೇದಿ ಕಾಣಿಸಿಕೊಂಡಿದೆ. ತಾಲೂಕು ಆರೋಗ್ಯಾಧಿಕಾರಿ ಡಾ.ರವೀಂದ್ರ ಮತ್ತು ಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಅಸ್ವಸ್ಥಗೊಂಡವರಿಗೆ ಚಿಕಿತ್ಸೆ ನೀಡಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದ ನೀರಿನ ಮಾದರಿ ಸಂಗ್ರಹಿಸಿ ಜಿಲ್ಲಾ ಪ್ರಯೋಗಾಲಯಕ್ಕೆ ಕಳಿಸಿದ್ದಾರೆ.