ಕೊಪ್ಪಳ: ಕಲ್ಯಾಣ ಕರ್ನಾಟ ಉತ್ಸವವನ್ನು ಸೆ.17ರಂದು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಅಧಿಕಾರಿಗಳಿಗೆ ಸೂಚಿಸಿದರು.
ಮಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಅಂದು ಬೆಳಗ್ಗೆ 9ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಇರಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸೇರಿ ಸಂಸದ, ಶಾಸಕರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೆ ರಚಿಸಿ ಸಮಿತಿಗಳು ನಿಮ್ಮ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಿ. ನಿಯಮ, ಶಿಷ್ಠಾಚಾರ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ.
ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಸ್ವಚ್ಚವಾಗಿರಲಿ. ಅಲಂಕಾರಗೊಳಿಸಿ. ಜಿಲ್ಲಾ ಕ್ರೀಡಾಂಗಣದಲ್ಲಿ ಆಗಮಿಸುವ ಸಾರ್ವಜನಿಕರಿಗೆ ಕುಡಿವ ನೀರಿನ ವ್ಯವಸ್ಥೆ ಮಾಡಿ. ಸ್ವಾತಂತ್ರೃ ಯೋಧರಿಗೆ ಸನ್ಮಾನಕ್ಕೆ ಏರ್ಪಾಟು ಮಾಡಿ. ಸಚಿವರ ಭಾಷಣಕ್ಕೆ ವಿವಿಧ ಇಲಾಖೆಗಳು ತಮ್ಮ ಇಲಾಖೆ ಸಾಧನೆ ವಿವರ ನೀಡಿ ಎಂದು ತಾಕೀತು ಮಾಡಿದರು.
ಎಸ್ಪಿ ಯಶೋದಾ ವಂಟಗೋಡಿ ಮಾತನಾಡಿ, ತುರ್ತು ಪರಿಸ್ಥಿತಿ ನಿರ್ವಹಿಸಲು ಕ್ರೀಡಾಂಗಣದಲ್ಲಿ ಆ್ಯಂಬುಲೆನ್ಸ್, ಅಗ್ನಿಶಾಮಕ ವಾಹನ, ಅಗತ್ಯ ಸಿಬ್ಬಂದಿ ನಿಯೋಜಿಸಿ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೇಶಭಕ್ತಿ ಗೀತೆಗಳಿಗೆ ಮಾತ್ರ ಅವಕಾಶ ನೀಡುವಂತೆ ಸಲಹೆ ನೀಡಿದರು.
ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಮಾತನಾಡಿ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಕೆಕೆಆರ್‌ಟಿಸಿ ಬಸ್ ಸೌಕರ್ಯ ಕಲ್ಪಿಸಿ. ಮಕ್ಕಳಿಗೆ ಹಾಲು ಅಥವಾ ಲಘು ಉಪಾಹಾರ ವಿತರಣೆಗೆ ಕ್ರಮ ಕೈಗೊಳ್ಳಿ. ಶಾಲಾ ಮ್ಕಕಳಿಂದ ಸಾಮೂಹಿಕ ನೃತ್ಯ, ಸಾಧಕರಿಗೆ ಸನ್ಮಾನ ಹಾಗೂ ಇತರ ಕಾರ್ಯಕ್ರಮಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಮುಂಚಿತವಾಗಿ ಮಾಹಿತಿ ನೀಡುವಂತೆ ತಿಳಿಸಿದರು.
ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ತಹಸೀಲ್ದಾರ ವಿಠ್ಠಲ ಚೌಗಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಹಳ್ಳಿ, ಕೊಪ್ಪಳ ನಗರ ಠಾಣೆ ಪಿಐ ಸಂತೋಷ ಹಳ್ಳೂರ ಇತರರಿದ್ದರು.