ಹುಬ್ಬಳ್ಳಿ: ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷದ ಪತನ ಹಾಗೂ ಬಿಜೆಪಿಯ ಗೆಲವು ಎಂಬ ಟ್ರೆಂಡ್ ನಡೆಯುತ್ತಿದೆ. ಅದು ಮುಂದುವರಿಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹೇಳಿದರು.
ಹುಬ್ಬಳ್ಳಿಯ ಬಮ್ಮಾಪುರ ಓಣಿಯ ಶ್ರೀ ಗುರುಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಹು-ಧಾ ಪೂರ್ವ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಂಕಲ್ಪ ಯಾತ್ರೆ ಉದ್ಘಾಟಿಸಿ ಅವರು ಮಾತನಾಡಿದರು.
ಗೋವಾ, ಮಣಿಪುರ, ಉತ್ತರಾಖಂಡ, ಉತ್ತರ ಪ್ರದೇಶದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬಂದಿದೆ. ಮುಂದೆ ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಅಧಿಕಾರಕ್ಕೆ ಬರಲಿದ್ದೇವೆ. ಕರ್ನಾಟಕದಲ್ಲೂ ಅಧಿಕಾರ ಉಳಿಸಿಕೊಳ್ಳಲಿದ್ದೇವೆ. 150 ಸ್ಥಾನಗಳನ್ನು ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ಕಾರ್ಯಕರ್ತರೇ ಬಿಜೆಪಿ ಪಕ್ಷದ ಆಸ್ತಿ. ಕಟ್ಟಕಡೆಯ ಕಾರ್ಯಕರ್ತರಿಗೆ ಉತ್ಸಾಹ ತುಂಬುವ ಕೆಲಸವನ್ನು ಅರುಣ ಸಿಂಗ್ ಅವರು ಮಾಡುತ್ತಿದ್ದಾರೆ. ಭ್ರಷ್ಟಾಚಾರ ರಹಿತವಾಗಿ ಸರ್ಕಾರದ ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ಧಾರವಾಡ ಜಿಲ್ಲೆಗೆ ಜವಳಿ ಪಾರ್ಕ್ ಮಂಜೂರು ಮಾಡಿದ್ದೇನೆ. ಸಕ್ಕರೆ ಕಾರ್ಖಾನೆ ತೆರೆಯಲು ಅನುಮೋದನೆ ಕೊಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ಉದ್ಯೋಗ ಸೃಷ್ಟಿ ಸುವ ಕೆಲಸ ಮಾಡುತ್ತೇವೆ ಎಂದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮಾತನಾಡಿ, ಮಿಷನ್-150 ಗುರಿ ಇಟ್ಟು ಕೊಂಡು ಚುನಾವಣೆ ತಂತ್ರ ಮಾಡುತ್ತಿದ್ದೇವೆ. ಕಾಂಗ್ರೆಸ್ ಪಕ್ಷ ನಮ್ಮನ್ನಉ ಶೇ. 40ರಷ್ಟು ಕಮಿಷನ್ ಸರ್ಕಾರ ಎಂದು ಆರೋಪ ಮಾಡುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಫಲಾನುಭವಿಗಳು 1 ರೂ. ಕಮಿಷನ್ ಕೊಟ್ಟಿಲ್ಲ ಎಂದು ಹೇಳುತ್ತಿದ್ದಾರೆ ಎಂದರು.
ಮನೆಯೊಂದು ಬಾಗಿಲು ಮೂರು ಎಂದಾಗಿರುವ ಕಾಂಗ್ರೆಸ್ ಪಕ್ಷವನ್ನು ಜೋಡಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಅವರು ತಾವು ಒಂದಾಗಿದ್ದೇವೆ ಎಂದು ತೋರಿಸುತ್ತಿದ್ದಾರೆ ಎಂದು ಹೇಳಿದರು.
ಹು- ಧಾ ಪೂರ್ವ ಬಿಜೆಪಿ ಅಧ್ಯಕ್ಷ ಪ್ರಭು ನವಲಗುಂದಮಠ ಸ್ವಾಗತಿಸಿದರು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಪ್ರಾಸ್ತಾವಿಕ ಮಾತನಾಡಿದರು. ಹು- ಧಾ ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಕಪಟಕರ, ಧಾರವಾಡ ವಿಭಾಗೀಯ ಪ್ರಮುಖ ಲಿಂಗರಾಜ ಪಾಟೀಲ, ಮಾಜಿ ಶಾಸಕರಾದ ಅಶೋಕ ಕಾಟವೆ, ವೀರಭದ್ರಪ್ಪ ಹಾಲಹರವಿ, ಹುಡಾ ಮಾಜಿ ಅಧ್ಯಕ್ಷ ನಾಗೇಶ ಕಲಬುರ್ಗಿ,ರಂಗಾ ಬದ್ದಿ, ಜಿಲ್ಲಾ ಪ್ರಕೋಷ್ಠದ ಸಂಚಾಲಕ ಚಂದ್ರಶೇಖರ ಗೋಕಾಕ, ಹನುಮಂತಪ್ಪ ದೊಡ್ಡಮನಿ, ಇತರರು ಇದ್ದರು.