ಜಿಲ್ಲೆ

ಕಾಂಗ್ರೆಸ್ ಬಂದಾಗಲೆಲ್ಲಾ ರಾಜ್ಯದಲ್ಲಿ ಬರಗಾಲ: ಸಂಸದ ಪ್ರಜ್ವಲ್ ರೇವಣ್ಣ ಆರೋಪ

ಹಾಸನ:  ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ದಲಿತರು, ರೈತರು ಹಾಗೂ ಬಡವರಿಗೆ ಹಲವು ರೀತಿಯಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಹೇಮಾವತಿ ಪ್ರತಿಮೆಯ ಮುಂಭಾಗದಿಂದ ನೂರಾರು ಜನ ಜೆಡಿಎಸ್ ಕಾರ್ಯಕರ್ತರು ಮೆರವಣಿಗೆ ನಡೆಸಿ ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಕೆಲ ಕಾಲ ಧರಣಿ ನಡೆಸಿದರು. ಐದು ಗ್ಯಾರಂಟಿಗೆ ಬೇರೆ ಬೇರೆ ಮೂಲಗಳಿಂದ ಹಣ ಹೊಂದಿಸಲಾಗದೆ, ಪರಿಶಿಷ್ಟ ಜಾತಿ-ಪಂಗಡಗಳ ಸಮುದಾಯದ ಕಲ್ಯಾಣಕ್ಕೆ ಮೀಸಲಾಗಿದ್ದ 11.500 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ಕಾಂಗ್ರೆಸ್ ಸರ್ಕಾರ ಯಾವಾಗಲೂ ಅಧಿಕಾರಕ್ಕೆ ಬಂದರೂ ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತದೆ. ಇದಕ್ಕೆ ಹಲವು ಉದಾಹರಣೆಗಳಿವೆ. ಇದು ಬರಗಾಲದ ಸರ್ಕಾರ ಎಂದು ಸಂಸದ ಪ್ರಜ್ವಲ್ ರೇವಣ್ಣ ಲೇವಡಿ ಮಾಡಿದರು.

ಈ ಹಿಂದೆ ಎಸ್‌ಎಂ ಕೃಷ್ಣ ಹಾಗೂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲೂ ಬರಗಾಲದ ಛಾಯೆ ಆವರಿಸಿತ್ತು. ಈಗಳು ಬರಗಾಲದ ಪರಿಸ್ಥಿತಿ ತಲೆದೋರಿದೆ. ಆದರೆ ಸಚಿವರು ಬರದ ಬಗ್ಗೆ ಗಮನ ಹರಿಸದೆ ಕೇವಲ ವರ್ಗಾವಣೆ ದಂಧೆ ಮಾಡುತ್ತಾ ತಮ್ಮ ಖಜಾನೆ ತುಂಬಿಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ತಮ್ಮ ನೂರು ದಿನದ ಆಡಳಿತದಲ್ಲಿ ರಾಜ್ಯಕ್ಕೆ ಯಾವ ಯೋಜನೆಗಳನ್ನ ಜಾರಿಗೆ ತಂದಿದ್ದಾರೆ? ಎಷ್ಟು ಹಣ ಖರ್ಚು ಮಾಡಿದ್ದಾರೆ? ನಮ್ಮ ಜಿಲ್ಲೆಗೆ ಎಷ್ಟು ಅನುದಾನ ನೀಡಿದ್ದಾರೆ? ಎಂಬುದನ್ನು ಬಹಿರಂಗಪಡಿಸಲಿ. ರೈತರು ವಿದ್ಯುತ್ ಇಲ್ಲದೆ ಪರದಾಡುತ್ತಿದ್ದಾರೆ. ಆದರೆ ತಮಿಳುನಾಡಿನ ರೈತರ ಹಿತ ಕಾಪಾಡಲು ರಾತ್ರೋರಾತ್ರಿ ನೀರು ಹೋರಿಸುವಂತಹ ಪರಿಸ್ಥಿತಿ ರಾಜ್ಯ ಸರ್ಕಾರಕ್ಕೆ ಬಂದಿದೆ ಎಂದು ಕಿಡಿಕಾರಿದರು.

ಮಾಜಿ ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್ ಮಾತನಾಡಿ, ದಲಿತರಿಗೆ ಮೀಸಲಿಟ್ಟಿದ್ದ ಹಣವನ್ನು ಬೇರೆ ಉದ್ದೇಶಕ್ಕೆ ಬಳಕೆ ಮಾಡುತ್ತಿರುವುದು ಆ ಸಮುದಾಯಕ್ಕೆ ಮಾಡಿರುವ ಅನ್ಯಾಯವಾಗಿದೆ. ಗಂಗಾ ಕಲ್ಯಾಣ ಯೋಜನೆ ಅಡಿ ಕೊರೆದಿರುವ ಬೋರ್ ವೆಲ್‌ಗಳಿಗೆ 3 ವರ್ಷ ಕಳೆದರೂ ವಿದ್ಯುತ್ ಸಂಪರ್ಕ ನೀಡಿಲ್ಲ. ಹೀಗಾಗಿ ಮೊದಲೇ ಮಳೆಯಿಲ್ಲದೆ ತೊಂದರೆ ಅನುಭವಿಸುತ್ತಿರುವ ರೈತರು, ಮತ್ತಷ್ಟು ಸಮಸ್ಯೆ ಅನುಭವಿಸುವಂತಾಗಿದೆ ಎಂದು ಕಿಡಿಕಾರಿದರು.

ಶಾಸಕ ಎಚ್.ಪಿ.ಸ್ವರೂಪ್ ಮಾತನಾಡಿ, ಜಿಲ್ಲೆಯ ಹಲವು ಕಡೆಗಳಲ್ಲಿ ಟ್ರಾನ್ಸ್‌ಫಾರ್ಮರ್‌ಗಳ ಕೊರತೆ ಇದ್ದು, ಪೂರೈಕೆ ಮಾಡುವಂತೆ ವಿವಿಧ ಗ್ರಾಪಂ ವತಿಯಿಂದ ಮನವಿ ಸಲ್ಲಿಸಿ ಹಲವು ತಿಂಗಳುಗಳೇ ಕಳೆದಿದ್ದರೂ, ಟಿಸಿ ಪೂರೈಕೆಯಾಗಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದರೆ ಅನುದಾನದ ಕೊರತೆ ಎಂದು ಹೇಳುತ್ತಿದ್ದಾರೆ. ಹೀಗಾದರೆ ಸಾಮಾನ್ಯ ಜನರು, ರೈತರು ಏನು ಮಾಡಬೇಕು ಎಂದು ಪ್ರಶ್ನಿಸಿದರು.

ಬರಪೀಡಿತ ಎಂದು ಘೋಷಿಸಿ

ಜಿಲ್ಲೆಯ ಏಳೂ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿ, ಸೂಕ್ತ ಪರಿಹಾರ ನೀಡಬೇಕು. ಕಾಡಾನೆ ಹಾವಳಿಯನ್ನು ತಡೆಯಲು ಶಾಶ್ವತ ಪರಿಹಾರ ರೂಪಿಸಬೇಕು ಮತ್ತು ಕಾಡಾನೆ ಸಂತ್ರಸ್ತರ ಪರ ಹೋರಾಟ ಮಾಡಲು ಹೋಗಿದ್ದ 11 ಮಂದಿಯನ್ನು ಬಂಧಿಸಿದ್ದು ಖಂಡನೀಯ. ಕೂಡಲೇ ಅವರ ವಿರುದ್ಧ ಪ್ರಕರಣ ಹಿಂಪಡೆಯಬೇಕು ಎಂದು ಮಾಜಿ ಶಾಸಕ ಎಚ್.ಕೆ. ಕುಮಾರಸ್ವಾಮಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಸ್ವಾಮೀಗೌಡ, ದುದ್ದ ಲಕ್ಷ್ಮಣಗೌಡ, ಕೆ.ಎಸ್.ಮಂಜೇಗೌಡ, ಹೊಂಗೆರೆ ರಘು, ಎಸ್ .ದ್ಯಾವೇಗೌಡ, ದೊಡ್ಡದಿಣ್ಣೆ ಸ್ವಾಮಿ, ಸಿ.ಆರ್. ಶಂಕರ್, ಸೈಯದ್ ಅಕ್ಬರ್, ಪೂರ್ಣಚಂದ್ರ ಇತರರು ಹಾಜರಿದ್ದರು.