ಮೈಸೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದೆ. ಅಧಿಕಾರಿಗಳನ್ನು ಪಕ್ಷದ ಕಾರ್ಯಕ್ರಮಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಬಿಜೆಪಿಯಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ ಕಾರ್ಯಕರ್ತರು, ಎಲ್ಲ ನಿರ್ಣಯಗಳನ್ನು ಏಕಪಕ್ಷೀಯವಾಗಿ ತೆಗೆದುಕೊಳ್ಳಲಾಗುತ್ತಿದೆ ಎಂದು ದೂರಿದರು.
ರಾಜ್ಯದ ಕಾಂಗ್ರೆಸ್ ನಾಯಕರು ಹಾಗೂ ಇತರ 24 ಪಕ್ಷದ ನಾಯಕರ ಉಪಚಾರಕ್ಕಾಗಿ 30ಕ್ಕೂ ಹೆಚ್ಚು ಐಎಎಸ್ ಅಧಿಕಾರಿಗಳನ್ನು ಬಳಸಿರುವುದು ಅಕ್ಷಮ್ಯ. ಸರ್ಕಾರದ ಕೆಲಸ ಮಾಡಬೇಕಾದ ಅಧಿಕಾರಿಗಳನ್ನು ಪಕ್ಷದ ಕೆಲಸಕ್ಕೆ ನಿಯೋಜಿಸುವ ಮೂಲಕ ಅಧಿಕಾರ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದರು.
ಬಜೆಟ್ ಚರ್ಚೆಗೆ ಅವಕಾಶ ನೀಡದೆ ಇದ್ದಾಗ ಸದನದಲ್ಲಿ ಪ್ರತಿಭಟಿಸಿದ ಬಿಜೆಪಿ ಶಾಸಕರನ್ನು ಕಾಗದ ಪತ್ರ ಹರಿದಿದ್ದಾರೆ ಎನ್ನುವ ನೆಪ ಹೇಳಿ ಅಮಾನತು ಮಾಡಿರುವುದು ವಿಷಾದನೀಯ. ಇಂತಹ ಘಟನೆ ಸರ್ವಾಧಿಕಾರಿ ಧೋರಣೆಯಾಗಿದೆ. ಸಭಾಧ್ಯಕ್ಷರು ಪಕ್ಷಾತೀತವಾಗಿ ಎಲ್ಲರನ್ನು ಸಮಾನವಾಗಿ ಕಾಣಬೇಕು. ಆದರೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ಗೆ ಚರ್ಚೆಗೆ ಅವಕಾಶ ನೀಡದೆ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿರುವುದನ್ನು ಖಂಡಿಸುತ್ತೇವೆ ಎಂದು ಹೇಳಿದರು. ಸಭಾಧ್ಯಕ್ಷರು ಎನ್ನುವುದನ್ನು ಮರೆತಿರುವ ಯು.ಟಿ.ಖಾದರ್ ಅವರು ಕಾಂಗ್ರೆಸ್ ಪಕ್ಷದ ಮನಸ್ಥಿತಿಯಲ್ಲೇ ಇದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಸ್ಪೀಕರ್ ಹುದ್ದೆ ಅಲಂಕರಿಸಿದವರು ಪಕ್ಷದ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸುವಂತಿಲ್ಲ. ಆದರೆ ಯು.ಟಿ.ಖಾದರ್ ಅವರು ಮಹಾಘಟಬಂಧನ್ ಸಭೆಗೆ ಹೋಗಿ ಎಐಸಿಸಿ ಮುಖಂಡರಾದ ಸೋನಿಯಾ ಗಾಂಧಿಗಾಗಿ ಕಾದು ಭೋಜನ ಸ್ವೀಕರಿಸಿ ಬಂದಿರುವುದು ನಾಚಿಕೆಗೇಡಿನ ಸಂಗತಿ. ನಿಷ್ಪಕ್ಷಪಾತವಾಗಿ ಸಭಾಧ್ಯಕ್ಷ ಸ್ಥಾನದ ಶಿಸ್ತು ಪಾಲಿಸದ ಖಾದರ್ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಬೇಕು ಒತ್ತಾಯಿಸಿದರು.
ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಓಲೈಕೆ ಮಾಡಿ, ಸಾಮಾನ್ಯರಿಗೆ ಮೋಸ ಮಾಡಲಾಗಿದೆ. ಕೇಂದ್ರದ ರೈತ ಕಿಸಾನ್ ನಿಧಿಯಡಿ ವಾರ್ಷಿಕವಾಗಿ ರಾಜ್ಯ ಸರ್ಕಾರದಿಂದ 4 ಸಾವಿರ ರೂ. ಜಮೆ ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ. ನೀರಾವರಿ ಯೋಜನೆಗೂ ಅನುದಾನ ಕಡಿತ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ ಅಶಾಂತಿ ನಿರ್ಮಾಣ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ರಾಜ್ಯದಲ್ಲಿ ಕೆಲ ತಿಂಗಳಲ್ಲಿಯೇ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸರ್ಕಾರ ತುಟಿ ಬಿಚ್ಚುತ್ತಿಲ್ಲ. ಜೈನ ಮುನಿ ಕೊಲೆ ಪ್ರಕರಣವನ್ನು ಸಿಬಿಐಗೆ ನೀಡದಿರುವುದೂ ಅನುಮಾನಕ್ಕೆ ಕಾರಣವಾಗಿದೆ. ಬಿಜೆಪಿ ಮಾಡಿರುವ ಉತ್ತಮ ಕೆಲಸಗಳನ್ನು ಸಹಿಸದೆ ರೈತರ ಮಕ್ಕಳು, ನೇಕಾರರು, ಆಟೋ, ಟ್ಯಾಕ್ಸಿ, ಕ್ಯಾಬ್ ಡ್ರೈವರ್‌ಗಳು, ಮೀನುಗಾರರ ಮಕ್ಕಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ನಿಲ್ಲಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಟಿ.ಎಸ್.ಶ್ರೀವತ್ಸ, ಮೇಯರ್ ಶಿವಕುಮಾರ್, ಮಾಜಿ ಸಚಿವರಾದ ಎಂ.ಶಿವಣ್ಣ, ಸಿ.ಎಚ್.ವಿಜಯಶಂಕರ್, ಮಾಜಿ ಶಾಸಕರಾದ ಎಲ್.ನಾಗೇಂದ್ರ, ಹರ್ಷವರ್ಧನ್, ವಿಧಾನ ಪರಿಷತ್ತು ಮಾಜಿ ಸದಸ್ಯರಾದ ಸಿದ್ದರಾಜು, ತೋಂಟದಾರ್ಯ, ಮುಡಾ ಮಾಜಿ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್, ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಮುಖಂಡರಾದ ಬಿ.ಪಿ.ಮಂಜುನಾಥ್, ಉಪಮೇಯರ್ ಡಾ.ರೂಪಾ, ಮೈಸೂರು ನಗರಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್, ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶಿವಕುಮಾರ್ ಇತರರು ಇದ್ದರು.