ಮೈಸೂರು: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ, ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಪುರಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರಸ್ತಕ ಸಾಲಿನಲ್ಲಿ ಉತ್ತಮ ಮಳೆಯಾಗಿಲ್ಲ. ಇದರಿಂದಾಗಿ ಕಾವೇರಿ ನದಿ ಅಚ್ಚುಕಟ್ಟು ವ್ಯಾಪ್ತಿಯ ಜಲಾಶಯಗಳು ಇನ್ನೂ ಭರ್ತಿಯಾಗಿಲ್ಲ. ಮಳೆಯ ಕೊರತೆಯಿಂದಾಗಿ ರೈತರ ಬೆಳೆಗಳು ಒಣಗುತ್ತಿವೆ. ಭವಿಷ್ಯದಲ್ಲಿ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದೆ. ಆದರೆ, ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ರೈತರ ಹಿತಾಸಕ್ತಿ ಕಡೆಗಣಿಸಿ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದೆ ಎಂದು ಕಿಡಿಕಾರಿದರು.
ಸುಪ್ರೀಂಕೋರ್ಟ್ ಆದೇಶಕ್ಕೂ ಮುನ್ನವೇ ನೀರು ಹರಿಸಿ ರಾಜ್ಯದ ಜನರಿಗೆ ದ್ರೋಹ ಬಗೆದಿದೆ. ಅಲ್ಲದೆ ನೀರಾವರಿ ಯೋಜನೆಗಳ ಬಗ್ಗೆ ನಿರ್ಲಕ್ಷೃ ವಹಿಸಿದ್ದು, ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿದ್ದ ಅನುದಾನ ಕಡಿತ ಮಾಡಿದೆ ಎಂದು ದೂರಿದರು.
ಶಾಸಕ ಟಿ.ಎಸ್.ಶ್ರೀವತ್ಸ, ಮೇಯರ್ ಶಿವಕುಮಾರ್, ಮಾಜಿ ಶಾಸಕ ಎಲ್.ನಾಗೇಂದ್ರ, ಮುಖಂಡರಾದ ಕೌಟಿಲ್ಯ ರಘು, ಯಶಸ್ವಿನಿ ಸೋಮಶೇಖರ್, ಮಿರ್ಲೆ ಶ್ರೀನಿವಾಸಗೌಡ, ಹೇಮಂತ್‌ಕುಮಾರ್, ಅನಿಲ್ ಥಾಮಸ್, ಅನೂಜ್ ಸ್ವಾರಸ್ವತ್, ಗಿರಿಧರ್, ವಾಣೀಶ್, ಸೋಮಶೇಖರ್, ಕವೀಶ್‌ಗೌಡ, ಶಿವಕುಮಾರ್, ಮೋಹನ್‌ಕುಮಾರ್ ಗೌಡ, ಮಹಿಳಾ ಮೋರ್ಚಾ ಅಧ್ಯಕ್ಷೆ ಹೇಮಾ ನಂದೀಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.