ಜಿಲ್ಲೆ

ಕಾಡಾನೆ ದಾಳಿ ತಪ್ಪಿಸಲು ಅರಣ್ಯ ಸಚಿವರೊಂದಿಗೆ ಸಭೆ : ಉಸ್ತುವಾರಿ ಸಚಿವ ಬೋಸರಾಜು ಹೇಳಿಕೆ



ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಕಾಡಾನೆ ದಾಳಿಯನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರವೇ ಅರಣ್ಯ ಸಚಿವರೊಂದಿಗೆ ಸಭೆ ನಡೆಸಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.


ಸೋಮವಾರ ವಿರಾಜಪೇಟೆ ತಾಲೂಕು ಮಾಲ್ದಾರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆಗೆ ವಿಷಾಧ ವ್ಯಕ್ತಪಡಿಸಿ ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಘಟನೆ ಬಗ್ಗೆ ಕೊಡಗು ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆದುಕೊಳ್ಳಲಾಗಿದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಈ ರೀತಿಯ ಘಟನೆಗಳು ಹೆಚ್ಚಾಗುತ್ತಿವೆ. ಘಟನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಇದಕ್ಕಾಗಿ ಅರಣ್ಯ ಸಚಿವರೊಂದಿಗೆ ಶೀಘ್ರದಲ್ಲೇ ಸಭೆಯನ್ನು ನಡೆಸಲಾಗುವುದು.

ಅರಣ್ಯ ಸಚಿವರೊಂದಿಗೆ ಈ ಬಗ್ಗೆ ಮಾತನಾಡಿದ್ದು, ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ. ಘಟನೆಯಲ್ಲಿ ತೊಂದರೆಗೀಡಾದ ಕುಟುಂಬಕ್ಕೆ ಅಗತ್ಯ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.