ಮೈಸೂರು: ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.
ನಗರದ ಗನ್‌ಹೌಸ್ ಬಳಿ ಕುವೆಂಪು ಉದ್ಯಾನದಲ್ಲಿ ಸೋಮವಾರ ಕರೆದಿದ್ದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ. ಇದರಿಂದ ನಿತ್ಯ ಗ್ರಾಮೀಣ ಭಾಗದ ಜನರು ಪ್ರಾಣಿಗಳಿಗೆ ಬಲಿಯಾಗುತ್ತಿದ್ದಾರೆ ಎಂದು ದೂರಿದರು.
ಪ್ರಾಣಿಗಳು ಕಾಡನ್ನು ತೊರೆದು ನಾಡಿಗೆ ಬರುವುದನ್ನು ತಡೆಗಟ್ಟಲು ಅರಣ್ಯ ಇಲಾಖೆ ಪರಿಣಾಮಕಾರಿಯಾಗಿ ಕ್ರಮ ವಹಿಸುತ್ತಿಲ್ಲ. ಇದರಿಂದಾಗಿ ಚಿರತೆ, ಆನೆ, ಹುಲಿ, ಹಂದಿ ಕಾಟದಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದು, ಇದರೊಂದಿಗೆ ಬೆಳೆ ಹಾನಿಯಾಗಿ ರೈತರು ಕಷ್ಟ, ನಷ್ಟ ಅನುಭವಿಸುವಂತಾಗಿದೆ ಎಂದು ಕಿಡಿಕಾರಿದರು.
ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು. ಕಾಡು ಪ್ರಾಣಿಗಳಿಂದ ರೈತರ, ಜನರ ಜೀವಹಾನಿ ತಪ್ಪಿಸಲು ರಾಜ್ಯ ಮಟ್ಟದಲ್ಲಿ ಪರಿಣತರ ಉನ್ನತ ಮಟ್ಟದ ಸಮಿತಿ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಎಪಿಎಂಸಿ ಕಾಯ್ದೆ ತಿದ್ದುಪಡಿ ಕೈಬಿಡಬೇಕು:
ಜಿಲ್ಲೆಯ 23 ರೈತರಿಂದ ಜೋಳ ಖರೀದಿಸಿದ ತಮಿಳುನಾಡಿನ ಖರೀದಿದಾರರು 3.50 ಕೋಟಿ ರೂ. ಮೋಸ ಮಾಡಿದ್ದಾರೆ. ರೈತರು ಹೆಚ್ಚಿನ ಬೆಲೆ ಕೊಡುತ್ತಾರೆಂದು ಪರಿಚಯವಿಲ್ಲದ ವ್ಯಕ್ತಿಗಳಿಗೆ ಉತ್ಪನ್ನಗಳನ್ನು ಮಾರಾಟ ಮಾಡುವಾಗ ಎಚ್ಚರಿಕೆ ವಹಿಸಬೇಕು. ರಾಜ್ಯದಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿಯ ಪರಿಣಾಮ ಈ ರೀತಿಯ ಘಟನೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಇನ್ನಾದರೂ ಎಚ್ಚೆತ್ತು ಈ ಕಾಯ್ದೆ ತಿದ್ದುಪಡಿಯನ್ನು ಕೈಬಿಡಬೇಕು ಎಂದು ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.
ಪ್ರತಿ ಟನ್ ಕಬ್ಬಿಗೆ 150 ರೂ. ಹೆಚ್ಚುವರಿ ಹಣ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ 25 ದಿನ ಕಳೆದರೂ ಸಕ್ಕರೆ ಕಾರ್ಖಾನೆಗಳು ರೈತರಿಗೆ ಹೆಚ್ಚುವರಿ ಹಣ ಪಾವತಿಸುತ್ತಿಲ್ಲ. ಈ ಬಗ್ಗೆ ಜಿಲ್ಲಾಡಳಿತ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕೃಷಿ ಪಂಪ್‌ಸೆಟ್‌ಗಳಿಗೆ ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ರೈತರು ಕಂಗಾಲಾಗಿದ್ದಾರೆ. ರಾತ್ರಿ ಪಾಳಿಯಲ್ಲಿ ಕೊಡುವುದನ್ನು ನಿಲ್ಲಿಸಿ, ಹಗಲು ವೇಳೆಯಲ್ಲಿ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಅತ್ತಹಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರ್ ಶಂಕರ, ಲಕ್ಷ್ಮೀಪುರ ವೆಂಕಟೇಶ್, ಕುರುಬೂರು ಸಿದ್ದೇಶ್, ಕೆಂಡಗಣ್ಣಸ್ವಾಮಿ, ಕಮಲಮ್ಮ, ಮಂಜುನಾಥ್, ಶ್ರೀರಾಮ ಮುಂತಾದವರು ಸಭೆಯಲ್ಲಿದ್ದರು.
ರಾಜಸ್ಥಾನದಲ್ಲಿ ರಾಷ್ಟ್ರೀಯ ರೈತ ಮುಖಂಡರ ಸಭೆ
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಗೆ ಶಾಸನ ರೂಪಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು. ಆದರೆ ಒಂದು ವರ್ಷವಾದರೂ ಜಾರಿ ಮಾಡಿಲ್ಲ. ಈ ಕುರಿತು ಚರ್ಚಿಸಿ ದೇಶಾದ್ಯಂತ ಪ್ರಬಲ ಹೋರಾಟ ರೂಪಿಸಲು ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ರಾಜಸ್ಥಾನದಲ್ಲಿ ಫೆಬ್ರವರಿ 6, 7, 8ರಂದು ರಾಷ್ಟ್ರೀಯ ರೈತ ಮುಖಂಡರ ಸಭೆ ಆಯೋಜಿಸಲಾಗಿದೆ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದರು.