ಜಿಲ್ಲೆ

ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ಹುಬ್ಬಳ್ಳಿ: ವಿವಿಧ ಹಂತದ ಕಾಗಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಸರ್ಕೀಟ್ ಹೌಸ್​ನಲ್ಲಿ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಹಾವಳಿಯಿಂದ ಸ್ಥಗಿತಗೊಂಡಿದ್ದ ಕಾಮಗಾರಿಗಳಿಗೆ ಮರು ಚಾಲನೆ ನೀಡಬೇಕು. ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆ ಹಾಗೂ ಮನೆಗಳಿಗೆ ಈಗಾಗಲೇ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ವಿಳಂಬವಾಗದಂತೆ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಬೇಕು.

ಹು-ಧಾ ಅವಳಿನಗರದಲ್ಲಿ ರಸ್ತೆಗಳು ಬಹಳಷ್ಟು ಹದಗೆಟ್ಟಿವೆ. ಇವುಗಳ ದುರಸ್ತಿ ಕೈಗೊಳ್ಳಬೇಕು. ಮಳೆಯಿಂದ ಹಾನಿಗೊಳಗಾದ ಬಿಆರ್​ಟಿಎಸ್ ರಸ್ತೆ ಹಾಗೂ ಸೇತುವೆಗಳನ್ನು ಸರಿಪಡಿಸಬೇಕು. ಯಾವುದೇ ಯೋಜನೆ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಸಲ್ಲದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಂಸದರು ಹಾಗೂ ಶಾಸಕರ ಅನುದಾನಗಳನ್ನು ಸಮರ್ಪಕವಾಗಿ ಬಳಸಬೇಕು. ಜಿಲ್ಲೆಯಲ್ಲಿ ಸರ್ಕಾರಿ ಭೂಮಿಯಲ್ಲಿ ಮನೆ ನಿರ್ವಿುಸಿ 94 ಸಿ ಅಡಿ ಅರ್ಜಿ ಸಲ್ಲಿಸಿದವರಿಗೆ ತ್ವರಿತವಾಗಿ ಹಕ್ಕುಪತ್ರಗಳನ್ನು ವಿತರಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಎಂಎಲ್​ಸಿ ಬಸವರಾಜ ಹೊರಟ್ಟಿ, ಬೆಳಗಾವಿ ವಿಭಾಗದ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ನಿತೇಶ ಪಾಟೀಲ್, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯ, ಜಿಪಂ ಸಿಇಒ ಡಾ.ಬಿ. ಸುಶೀಲ, ಮಹಾನಗರ ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ್, ಉಪವಿಭಾಗಧಿಕಾರಿ ಡಾ.ಬಿ. ಗೋಪಾಲಕೃಷ್ಣ, ತಹಸೀಲ್ದಾರ್​ಗಳಾದ ಶಶಿಧರ ಮಾಡ್ಯಾಳ, ಪ್ರಕಾಶ ನಾಶಿ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.