ಔರಾದ್: ಗ್ರಾಮೀಣ ಭಾಗದ ಜನರು ಉದ್ಯೋಗವನ್ನರಸಿ ಪಟ್ಟಣಗಳಿಗೆ ವಲಸೆ ಹೋಗದೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಲಾಭ ಪಡೆದು ತಮ್ಮ ಸ್ವಂತ ಊರಿನಲ್ಲಿ ಕೆಲಸ ಮಾಡಬೇಕು ಎಂದು ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಹೇಳಿದರು.
ವಡಗಾಂವ ಗ್ರಾಪಂ ವ್ಯಾಪ್ತಿಯ ಖಾನಾಪುರದಲ್ಲಿ ಮಂಗಳವಾರ ಆಯೋಜಿಸಿದ್ದ ಕಾಯಕ ಮಾಸಾಚರಣೆ ಹಾಗೂ ಅರೋಗ್ಯ ತಪಾಸಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವೈಯಕ್ತಿಕ ಕಾಮಗಾರಿಗಳನ್ನು ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಗ್ರಾಮೀಣ ಭಾಗದ ಜನರು ಗುಳೆ ಹೋಗುವುದನ್ನು ತಪ್ಪಿಸಿ ಅವರ ಸ್ವಂತ ಗ್ರಾಮದಲ್ಲಿಯೇ ಕೆಲಸ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ. ಮೇಟಿಗಳು ಕೂಲಿ ಕಾರ್ಮಿಕರಿಗೆ ಹೆಚ್ಚು ಕೆಲಸ ಒದಗಿಸಿ ಮಾನವ ದಿನಗಳನ್ನು ಹೆಚ್ಚಿಸಬೇಕು ಎಂದರು.
ಪಿಒಡಿ ಅನಿಲಕುಮಾರ ಪಾಟೀಲ ಮಾತನಾಡಿದರು. ಗ್ರಾಪಂ ಅಧ್ಯಕ್ಷ ರಾಜಕುಮಾರ ಹೇಡೆ, ಮಲ್ಲಿಕಾರ್ಜುನ ಕೇಸರಿ, ಸುಂದರ, ತಾಂತ್ರಿಕ ಸಂಯೋಜಕ ಆನಂದ, ಸಂಜುಕುಮಾರ ಇತರರಿದ್ದರು. ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು.