ಜಿಲ್ಲೆ

ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು.

ರಾಜ್ಯದ ಆರೋಗ್ಯ ಇಲಾಖೆಯ ಒಳ ಮತ್ತು ಹೊರ ಗುತ್ತಿಗೆ ನೌಕರರಿಗೆ ಸಂಬಂಧಿಸಿದ ಶ್ರೀನಿವಾಸಾಚಾರ್ ವರದಿಯನ್ನು ತಕ್ಷಣ ಜಾರಿಗೊಳಿಸಬೇಕು ಮತ್ತು ನೌಕರರನ್ನು ಕಾಯಂಗೊಳಿಸಬೇಕು, ಕೆಎಸ್‌ಆರ್‌ಟಿಸಿ ನೌಕರರ ವೇತನ ಪರಿಷ್ಕರಣೆ ತಕ್ಷಣ ಮಾಡಿ ಸರ್ಕಾರಿ ನೌಕರರಿಗೆ ಸರಿಸಮಾನ ವೇತನ ನಿಗದಿ ಮಾಡಬೇಕು, ಸರ್ಕಾರದ ಎಲ್ಲ ಇಲಾಖೆಯಲ್ಲಿ ಒಳಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕ ಪದ್ಧತಿ ಕೈ ಬಿಡಬೇಕು, ಹಾಲಿ ಇರುವ ಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದು ಆಗ್ರಹಿಸಲಾಯಿತು.

ಕನಿಷ್ಠ ವೇತನವನ್ನು 21 ಸಾವಿರ ರೂ.ಗೆ ಏರಿಕೆ ಮಾಡಬೇಕು, ಮೂರು ವರ್ಷಕ್ಕೊಮ್ಮೆ ಪರಿಷ್ಕರಣೆ ಮಾಡಬೇಕು, ಎಲ್ಲ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಪಿಎಫ್ ನಿಧಿಯಿಂದ ನೀಡುತ್ತಿರುವ ಪಿಂಚಣಿಯನ್ನು 5,000 ರೂ.ಗೆ ಏರಿಸಬೇಕು, ಸರ್ಕಾರಿ ಮತ್ತು ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು ಮತ್ತು ಅವುಗಳನ್ನು ಆಧುನೀಕರಣ ಮಾಡಬೇಕು ಎಂದು ಒತ್ತಾಯಿಸಲಾಯಿತು. ಸಂಘದ ಜಿಲ್ಲಾ ಉಪಾಧ್ಯಕ್ಷ ಚಂದ್ರು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.