ಮೈಸೂರು: ನಗರದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಕಾಲೇಜು ಕ್ಯಾಂಪಸ್‌ಗಳಲ್ಲಿ ದ್ವಿಚಕ್ರ ವಾಹನ ಬಳಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸದೆ ಇದ್ದಲ್ಲಿ ಕಾಲೇಜಿನ ಆವರಣದೊಳಗೆ ಪ್ರವೇಶ ನಿರ್ಬಂಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚಿಸಿದರು.
ನಗರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕಾಲೇಜು ಆಡಳಿತ ವರ್ಗ ಕಾನೂನು ಬದ್ಧವಾಗಿ ಕ್ರಮ ಕೈಗೊಂಡು ಕಡ್ಡಾಯ ಹೆಲ್ಮೆಟ್ ನೀತಿಯನ್ನು ಅನುಸರಿಸುವಂತೆ ನಿಯಮಾವಳಿ ರೂಪಿಸಿಕೊಳ್ಳಬೇಕು ಎಂದರು.
ಕಾಲೇಜುಗಳಲ್ಲಿ ಸಂಚಾರ ನಿಯಮ ಪಾಲಿಸದೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿರುವುದು ಹೆಚ್ಚುತ್ತಿದೆ. ಕಾಲೇಜು ಕ್ಯಾಂಪಸ್‌ನಲ್ಲಿ ವಾಹನ ಚಲಿಸುವ ಪ್ರತಿಯೊಬ್ಬ ಸವಾರ ಹೆಲ್ಮೆಟ್ ಕಡ್ಡಾಯವಾಗಿ ಧರಿಸುವಂತೆ ಕಾಲೇಜು ಆಡಳಿತ ಮಂಡಳಿ ಸೂಚಿಸಬೇಕು ಎಂದು ಹೇಳಿದರು.
ವಾಹನ ಸವಾರರು ಕೂಡ ತಮ್ಮ ಜತೆಗೆ ಎರಡು ಹೆಲ್ಮೆಟ್ ಇರಿಸಿಕೊಳ್ಳುವಂತೆ ಸೂಚಿಸಬೇಕು. ಇತ್ತೀಚೆಗೆ ತಿ.ನರಸೀಪುರದಲ್ಲಿ ಸಂಭವಿಸಿದ ಅಪಘಾತದ ವಿಚಾರವಾಗಿ ಸಂಬಂಧಪಟ್ಟವರ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು. ರಸ್ತೆ ಅಪಘಾತಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕೆಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಅವರಿಗೆ ತಿಳಿಸಿದರು.
ಟೂರ್ ಟ್ಯಾಕ್ಸಿ ಚಾಲಕರು, ಲಾರಿ ಚಾಲಕರು ಮತ್ತು ಲಾರಿ ಮಾಲೀಕರ ಸಂಘದ ಅಧ್ಯಕ್ಷರೊಂದಿಗೆ ಸಭೆ ನಡೆಸಿ ರಾತ್ರಿ ವೇಳೆ ಸಂಚರಿಸುವ ವಾಹನಗಳು ನಿಯಮ ಪಾಲಿಸುವಂತೆ ಸೂಚಿಸಬೇಕು. ಕಡ್ಡಾಯವಾಗಿ ತಲಾ ಇಬ್ಬರು ಡ್ರೈವರ್ ಒಳಗೊಂಡಂತೆ ಕಾರ್ಯನಿರ್ವಹಿಸಬೇಕೆಂದು ನಿರ್ದೇಶನ ನೀಡಿದರು.
ಮಳೆಗಾಲದಲ್ಲಿ ರಸ್ತೆಗಳಲ್ಲಿ ಹೆಚ್ಚಿನ ಅಪಘಾತಗಳು ಉಂಟಾಗುವುದರಿಂದ ರಸ್ತೆ ಉಬ್ಬುಗಳ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಸ್ತೆಗಳಲ್ಲಿ ಸುರಕ್ಷತಾ ನಿಯಮಾವಳಿ ಅಳವಡಿಸಬೇಕು. ಕೆಲವು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಆದಷ್ಟು ಬೇಗ ಟೆಂಡರ್ ಕರೆದು ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬಂಧಿಸಿದಂತೆ ಕಾಮಗಾರಿಗಳು ನಡೆಯುತ್ತಿರುವ ರಸ್ತೆಗಳಲ್ಲಿ ಮಲ್ಟಿಪಲ್ ಸೈನ್ ಬೋರ್ಡ್ ಅಳವಡಿಸಬೇಕು. ಕಾಮಗಾರಿ ಸಂದರ್ಭದಲ್ಲಿ ಆಗುವ ಅಪಾಯಕಾರಿ ಘಟನೆಗಳ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.