ಬಾಗಲಕೋಟೆ: ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಜಿಲ್ಲಾಡಳಿತದ ಎದುರು ಪ್ರತಿಭಟನೆ ನಡೆಸಲಾಯಿತು.
ನವನಗರದ ಜಿಲ್ಲಾಡಳಿತ ಭವನಕ್ಕೆ ಪ್ರತಿಭಟನಾ ರ‍್ಯಾಲಿ ಮೂಲಕ ಆಗಮಿಸಿ ಕಾವೇರಿ ನಿರ್ವಹಣಾ ಪ್ರಾಧಿಕಾರ ತನ್ನ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕರಕ್ಕೆ ಮನವಿ ಸಲ್ಲಿಸಿದರು.
ಈ ವರ್ಷ ರಾಜ್ಯದಲ್ಲಿ ತೀವ್ರ ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ೧೯೨ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ವಿಶೇಷವಾಗಿ ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ಕೃಷ್ಣರಾಜಸಾಗರ ಜಲಾಶಯದಲ್ಲಿ ಉಳಿದಿರುವುದು ಕೇವಲ ೨೦ ಟಿಎಂಸಿ ನೀರು. ಅದರಲ್ಲಿ ಬಳಕೆಗೆ ಸಿಗುವುದು ಕೇವಲ ೧೫ ಟಿಎಂಸಿ ನೀರು ಮಾತ್ರ. ಇಂತಹ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಅಂದಾಜು ೭ ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಶ್ವರ್ಯಕರವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತ ಪಡಿಸಿದರು.
ಬೆಂಗಳೂರಿಗೆ ಪ್ರತಿ ತಿಂಗಳು ಕುಡಿಯುವ ನೀರಿಗೆ ಒಂದೂವರೆ ಟಿಎಂಸಿ ನೀರು ಬೇಕು. ಕಾವೇರಿ ಕಣಿವೆಯ ರೈತರ ಹೊಲಗದ್ದೆಗಳಿಗೆ ನೀರಿಲ್ಲ. ಕೈಗಾರಿಕೆಗಳಿಗೆ ಕೊಡಲು ನೀರಿಲ್ಲ. ಹೀಗಿರುವಾಗ ಏಳು ಟಿಎಂಸಿ ನೀರು ಎಲ್ಲಿಂದ ತರಲು ಸಾಧ್ಯ. ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಪಾಲಿಸಬಾರದು. ನಾಡಿನ ಜನರ ಜೀವಗಳಿಗಿಂತ ಯಾವುದೋ ಪ್ರಾಧಿಕಾರದ ಆದೇಶ ದೊಡ್ಡದಾಗಲು ಹೇಗೆ ಸಾಧ್ಯ. ಈ ಪ್ರಾಧಿಕಾರದ ಆದೇಶ ಪಾಲಿಸಲು ಹೋಗಿ ಅವರು, ಕೇಳಿದಷ್ಟು ನೀರನ್ನು ಇದುವರೆಗೆ ಬಿಟ್ಟಿದ್ದೇ ರಾಜ್ಯ ಸರ್ಕಾರದ ದೊಡ್ಡ ತಪ್ಪು. ಈಗಲೂ ಸರ್ಕಾರ ಸ್ಪಷ್ಟ ಧೋರಣೆಯನ್ನು ಪ್ರಕಟಿಸಿದಂತೆ ಕಾಣುತ್ತಿಲ್ಲ. ಈಗಲಾದರೂ ರಾಜ್ಯ ಸರ್ಕಾರ ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತಾಡುವುದನ್ನು ಬಿಟ್ಟು ಯಾವುದೇ ಕಾರಣಕ್ಕೂ ನೀರು ಬಿಡುವುದಿಲ್ಲ ಎಂಬ ದೃಢ ಘೋಷಣೆಯನ್ನು ಮಾಡಬೇಕು ಎಂದು ಒತ್ತಾಯಿಸಿದರು.
ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ, ಮಲ್ಲು ಕಟ್ಟಿಮನಿ, ರಾಹುಲ್ ಶೆಟ್ಟರ, ಶಶಿಕುಮಾರ ದಂಡಿನ, ಗಣೇಶ ನಾಯಕ, ಸಂಗಮೇಶ ಅಂಬಿಗೇರ, ಸಾಗರ ಬಿರಾದಾರ ಇತರರು ಇದ್ದರು.