ಜಿಲ್ಲೆ

ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಿ: ಡಾ.ಕೆ.ವಿ.ರಾಜೇಂದ್ರ ಸೂಚನೆ

ಮೈಸೂರು: ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗುತ್ತಿಲ್ಲ. ಜಲಾಶಯಗಳ ನೀರಿನ ಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕುಡಿಯುವ ನೀರಿನ ಲಭ್ಯತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ 256 ಗ್ರಾಮ ಪಂಚಾಯಿತಿ ಹಾಗೂ 13 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ನೀರು ಸರಬರಾಜು ಮಾಡಬೇಕು. ಪ್ರತಿದಿನ ನೀರಿನ ಲಭ್ಯತೆ ಬಗ್ಗೆ ಮಾಹಿತಿ ನೀಡಬೇಕು. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಆಗಬಹುದಾದ ಗ್ರಾಮಗಳ ಪಟ್ಟಿ ಮಾಡಿಕೊಂಡು ಅದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಸಂಬಂಧ ವರದಿ ನೀಡಬೇಕು ಎಂದು ಗ್ರಾಮೀಣ ಕುಡಿಯುವ ನೀರು ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ನಿರ್ದೇಶನ ನೀಡಿದರು.
ಉತ್ತಮವಾಗಿ ಮಳೆ ಆಗದಿದ್ದರೂ ಸದ್ಯಕ್ಕೆ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ಆದರೂ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಕಂಡುಬರಬಹುದಾದ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ನೀರಿನ ಸಮಸ್ಯೆ ಕಂಡುಬಂದರೆ ಕೈಗೊಳ್ಳಬಹುದಾದ ಕ್ರಮಗಳನ್ನು ಗುರುತಿಸಿಕೊಳ್ಳಿ. ಸಮಸ್ಯೆ ಕಂಡುಬಂದರೆ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ನೀರಿನ ಪೂರೈಕೆ ಮಾಡಿ. ಖಾಸಗಿ ಕೊಳವೆ ಬಾವಿಗಳು ದೊರೆಯದೆ ಹೋದರೆ ಅಂತಿಮವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದರು.
ಗುಣಮಟ್ಟ ಪರೀಕ್ಷಿಸಿಕೊಳ್ಳಿ:
ನೀರು ಪೂರೈಸುವುದು ಮಾತ್ರವಲ್ಲ, ಕುಡಿಯುವ ನೀರಿನ ಗುಣಮಟ್ಟವನ್ನು ಪರಿಶೀಲಿಸಬೇಕು. ಕುಡಿಯುವ ನೀರಿನಲ್ಲಿ ಬ್ಯಾಕ್ಟೀರಿಯ ಮತ್ತು ಕೆಮಿಕಲ್ ಇಲ್ಲದಂತೆ ನೋಡಿಕೊಳ್ಳಬೇಕು. ಓವರ್‌ಹೆಡ್ ಟ್ಯಾಂಕ್ ಹಾಗೂ ಸಂಪ್‌ಗಳನ್ನು ನಿಯಮಿತವಾಗಿ ಸ್ವಚ್ಛತೆ ಮಾಡಿಸಬೇಕು. ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಕೊಳಚೆ ನೀರು ಕುಡಿಯುವ ನೀರಿನಲ್ಲಿ ಸೇರದಂತೆ ಗಮನ ಹರಿಸಬೇಕು. ತಪ್ಪಿದರೆ ಸಂಬಂಧಿಸಿದ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಾದರಿಗಳನ್ನು ಪರೀಕ್ಷಿಸಿ:
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಗಾಯತ್ರಿ ಮಾತನಾಡಿ, ಕುಡಿಯುವ ನೀರಿನ ಮಾದರಿಗಳನ್ನು ಪಡೆದು ಪರೀಕ್ಷಿಸಬೇಕು. ನಾವು ಕುಡಿಯುವ ನೀರು ಶುದ್ಧವಾಗಿದೆ ಮತ್ತು ಯಾವುದೇ ಬ್ಯಾಕ್ಟೀರಿಯಾ ಮತ್ತು ಹಾನಿಕಾರಕ ಲೋಹಗಳನ್ನು ಹೊಂದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಲು ಪ್ರಯೋಗಾಲಯದಲ್ಲಿ ನೀರಿನ ವಿಶ್ಲೇಷಣೆ ಮಾಡಿಸುವುದು ಅಗತ್ಯ. ಇದನ್ನು ಅಧಿಕಾರಿಗಳು ಮೊದಲ ಆದ್ಯತೆಯಲ್ಲಿ ಕ್ರಮವಹಿಸಬೇಕು ಎಂದು ತಿಳಿಸಿದರು.
ಕುಡಿಯುವ ನೀರಿನ ವಿಶ್ಲೇಷಣೆಯಲ್ಲಿ ಕುಡಿಯುವ ನೀರಿನ ಮಾದರಿಯು ಪ್ರಮುಖ ಪ್ರಕ್ರಿಯೆಯಾಗಿದೆ. ಅದನ್ನು ಪರೀಕ್ಷಿಸಲು ನೀರಿನ ಮೂಲವನ್ನು ಪ್ರತಿನಿಧಿಸುವ ಸ್ಥಳದಿಂದ ತೆಗೆದುಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.
ಕ್ರಮ ವಹಿಸುತ್ತೇವೆ:
ಗ್ರಾಮೀಣ ಕುಡಿಯುವ ನೀರಿನ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಸುರೇಶ್‌ಬಾಬು ಮಾತನಾಡಿ, ಈಗಾಗಲೇ ಸಮಸ್ಯೆಗಳು ಕಂಡುಬರುವ ಗ್ರಾಮಗಳನ್ನು ಗುರುತಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಪಡೆಯುತ್ತೇವೆ. ಇಲ್ಲವೇ ಟ್ಯಾಂಕರ್ ಮೂಲಕ ಬೇರೆ ಕಡೆಯಿಂದ ನೀರು ತಂದು ಸರಬರಾಜು ಮಾಡಲು ಅಗತ್ಯ ಕ್ರಮ ವಹಿಸುತ್ತೇವೆ ಎಂದು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಮ್, ಇನ್ನಿತರೆ ಇಲಾಖೆ ಅಧಿಕಾರಿಗಳು ಇದ್ದರು.