ಬಾಗಲಕೋಟೆ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಕುಡಿಯುವ ನೀರಿನ ಪೂರೈಕೆಯಲ್ಲಿ ಕೊರತೆಯಾಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿನ ಲಭ್ಯತೆ ಮತ್ತು ಪೂರೈಕೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಆಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಪ್ರತಿದಿನ ದಿನಪತ್ರಿಕೆಗಳಲ್ಲಿ ಪ್ರಕಟಣವಾಗುತ್ತಿದ್ದು, ಆಯಾ ತಾಲೂಕಿನ ಸಮಿತಿ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳು ಕೂಡಲೇ ಸಮಸ್ಯಾತ್ಮಕ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಕುರಿತು ನೈಜತೆ, ಪ್ರಸ್ತುತ ಸ್ಥಿತಿ ಬಗ್ಗೆ ತುರ್ತು ಕ್ರಮವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಹಶೀಲ್ದಾರ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ, ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಹಾಗೂ ಗ್ರಾಮ ಆಡಳಿತ ಅಧಿಕಾರಿ ಹಂತದಲ್ಲಿ ಸಭೆ ನಡೆಸಿ ಸಮಸ್ಯಾತ್ಮಕ ಗ್ರಾಮಗಳಲ್ಲಿರುವ ಜನಸಂಖ್ಯೆ, ಖಾಸಗಿ ಕೊಳವೆ ಭಾವಿಗಳ ಸಂಖ್ಯೆಗಳ ಬಗ್ಗೆ ವರದಿ ಪಡೆದು ಖಾಸಗಿ ಕೊಳವೆ ಭಾವಿಗಳ ಮಾಲಿಕರ ಜೊತೆಗೆ ಒಪ್ಪಂದ ಮಾಡಿಕೊಳ್ಳಬೇಕು. ಭೂವಿಜ್ಞಾನ ಮತ್ತು ಅಂತರ್ಜಲ ಅಧಿಕಾರಿಗಳಿ ಕಳೆದ ವರ್ಷ ಅಂತರ್ಜಲದ ನೀರಿನ ಮಟ್ಟದ ಬಗ್ಗೆ ಸಮೀಕ್ಷೆ ಮಾಡಿರುವ ವರದಿ ಪಡೆದು ಅಗತ್ಯವಿದ್ದಲ್ಲಿ ಕೊಳವೆ ಬಾವಿಗಳನ್ನು ಕೊರೆಯಿಸಲು ಕ್ರಮವಹಿಸಬೇಕು. ನಗರ, ಗ್ರಾಮಗಳಲ್ಲಿರುವ ಶಾಲೆ, ವಸತಿ ನಿಲಯ ಹಾಗೂ ಆಸ್ಪತ್ರೆಗಳಲ್ಲಿ ಯಾವುದೇ ರೀತಿಯ ನೀರಿನ ತೊಂದರೆ ಆಗದಂತೆ ನಿಗಾವಹಿಸಲು ತಿಳಿಸಿದರು.
ಕುಡಿಯುವ ನೀರಿನ ಬಗ್ಗೆ ಈಗಾಗಲೇ ಉಪವಿಭಾಗ ಹಾಗೂ ತಾಲೂಕಾ ಮಟ್ಟದಲ್ಲಿ ಸಭೆ ನಡೆಸಿದ ಬಗ್ಗೆ ಸಭೆಯಲ್ಲಿ ಮಾಹಿತಿ ಕೇಳಿದಾಗ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಮಾತನಾಡಿ ಈಗಾಗಲೇ ರಬಕವಿ-ಬನಹಟ್ಟಿ, ಮುಧೋಳ, ಜಮಖಂಡಿ ಹಾಗೂ ಬೀಳಗಿ ತಾಲೂಕಾ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಕುಡಿಯುವ ನೀರಿನ ಕೊರತೆಯಾಗದಂತೆ ಸೂಕ್ತ ಕ್ರಮವಹಿಸಲು ನಿರ್ದೇಶನ ನೀಡಲಾಗಿದೆ. ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ೨ ಟಿಎಂಸಿ ನೀರನ್ನು ಬಿಡಲು ಬೆಳಗಾವಿ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದು, ನೀರು ಉದ್ದೇಶಿತ ಸ್ಥಳಕ್ಕೆ ತಲುಪುವಂತೆ ನೋಡಿಕೊಳ್ಳಲು ಈಗಾಗಲೇ ಕಂದಾಯ, ಪೊಲೀಸ್, ನೀರಾವರಿ ಹಾಗೂ ಹೆಸ್ಕಾಂ ಅಧಿಕಾರಿಗಳನ್ನೊಳಗೊಂಡ ತಂಡ ರಚಿಸಿ ಕ್ರಮವಹಿಸಲಾಗುತ್ತಿದೆ ಎಂದು ಹೇಳಿದರು
ಬಾಗಲಕೋಟೆ ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ ಮಾತನಾಡಿ ಬಾದಾಮಿ, ಬಾಗಲಕೋಟೆ ಹಾಗೂ ಗುಳೇದಗುಡ್ಡ ತಾಲೂಕಾ ಕಚೇರಿಗಳಿಗೆ ಭೇಟಿ ನೀಡಿದ್ದು, ಸಮಸ್ಯಾತ್ಮಕ ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಖುದ್ದಾಗಿ ಸ್ಥಳ ವೀಕ್ಷಣೆ ಮಾಡಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ವಿವಿಧ ಅಧಿಕಾರಿಗಳ ಜೊತೆ ಸಭೆ ಕೂಡಾ ನಡೆಸಲಾಗಿದೆ ಎಂದರು.
ಸಮಸ್ಯಾತ್ಮಕ ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿ ಮಾಲಿಕರ ಜೊತೆ ಒಡಂಬಡಿಕೆ ಮಾಡಿಕೊಳ್ಳಬೇಕು. ಬಿಸಿಗಾಳಿಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯಿಂದ ಹಾಗೂ ವಿಪತ್ತು ನಿರ್ವಹಣೆ ಇಲಾಖೆಯಿಂದ ಬಂದಿರುವ ಸಲಹೆ ಸೂಚನೆಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುವ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೇನ್ನವರ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಸುರುಕೋಡ ಸೇರಿದಂತೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು, ಆಯಾ ತಾಲೂಕಿನ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಉಪಸ್ಥಿತರಿದ್ದರು.