ಭಾಲ್ಕಿ: ಪಟ್ಟಣ ಸೇರಿ ತಾಲೂಕಿನಾದ್ಯಂತ ಜೂನ್ ಅಂತ್ಯದವರೆಗೂ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸೂಚಿಸಿದರು.
ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಅಧಿಕಾರಿಗಳ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇಸಿಗೆ ಪ್ರಾರಂಭವಾಗುತ್ತಿದೆ. ನೀರಿನ ಸಮಸ್ಯೆ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಸನ್ನದ್ಧರಾಗಬೇಕು. ತಾಲೂಕಿನ ಎಲ್ಲ ೧೬೦ ಜನ ವಸತಿ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ದೂರು ಬರದಂತೆ ಎಚ್ಚರ ವಹಿಸಬೇಕು ಎಂದು ತಾಕೀತು ಮಾಡಿದರು.
ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ನೀರು ಪೂರೈಕೆಗೆ ೧೫ನೇ ಹಣಕಾಸು ಯೋಜನೆಯಡಿ ಅನುದಾನ ಮೀಸಲಿಡಲಾಗಿದೆ. ಜತೆಗೆ ಪುರಸಭೆಯಲ್ಲಿ ಕೂಡ ಅನುದಾನದ ಲಭ್ಯತೆ ಇದೆ. ಹಾಗಾಗಿ ಕಂದಾಯ ಇಲಾಖೆ, ಪಂಚಾಯತ್ ರಾಜ್ ಮತ್ತು ಜೆಸ್ಕಾ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಹಳ್ಳಿ ಹಳ್ಳಿಗಳಿಗೂ ಭೇಟಿ ನೀಡಿ ಮಾಹಿತಿ ಪಡೆದು ಕಾಲಕಾಲಕ್ಕೆ ಸಭೆ ನಡೆಸಿ ಬೇಸಿಗೆ ಅವಧಿ ಮುಗಿಯುವವರೆಗೂ ಯಾವೊಂದು ಜನವಸತಿ ಪ್ರದೇಶದಲ್ಲಿಯೂ ಕೂಡ ಕುಡಿಯುವ ನೀರಿನ ಸಮಸ್ಯೆ ಬರದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು.
ಗಡಿಭಾಗದ ಕೊಂಗಳಿ ಬ್ಯಾರೇಜ್‌ನಿಂದ ಹೇಳಕೇಳದೇ ನೀರು ಬಿಡುಗಡೆ ಮಾಡಿದ ಕಾರಂಜಾ ಅಧಿಕಾರಿಯನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಯಾವ ಅಧಿಕಾರಿ ನೀರು ಬಿಡುಗಡೆಗೆ ಸೂಚನೆ ನೀಡಿದ್ದಾರೆ. ಯಾರ ಒತ್ತಡಕ್ಕೆ ಮಣಿದು ಈ ಕ್ರಮ ಅನುಸರಿಸಿದ್ದೀರಿ ಅಂತವರನ್ನು ತನಿಖೆಗೆ ಒಳಪಡಿಸಿ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ವೇತನ ನೀಡದಿರುವ ಬಗ್ಗೆ ದೂರು ಬಂದಿವೆ. ವೇತನ ನೀಡಲು ಏಕೆ ವಿಳಂಬ ಮಾಡುತ್ತಿದ್ದೀರಿ ಎಂದು ವೈದ್ಯರನ್ನು ಪ್ರಶ್ನಿಸಿದರು.
ವೈದ್ಯರು ಸಮಜಾಯಿಷಿ ನೀಡುವ ಪ್ರಯತ್ನ ಮಾಡಿದರು. ಇದಕ್ಕೆ ಕೆರಳಿದ ಸಚಿವರು ವೇತನ ನೀಡದಿದ್ದರೆ ಸಿಬ್ಬಂದಿ ಹೇಗೆ ಕೆಲಸ ಮಾಡಲು ಸಾಧ್ಯ. ಮತ್ತೊಮ್ಮೆ ಈ ರೀತಿ ದೂರು ಬರದಂತೆ ನೋಡಿಕೊಳ್ಳಬೇಕು. ಕೂಡಲೇ ಆ ಸಿಬ್ಬಂದಿ ವೇತನ ಬಿಡುಗಡೆ ಮಾಡುವಂತೆ ಸೂಚನೆ ನೀಡಿದರು.
ತಾಲೂಕಿನಲ್ಲಿ ರೈತರ ಅನುಕೂಲಕ್ಕಾಗಿ ತೊಗರಿ ಖರೀದಿ ಕೇಂದ್ರ ಆರಂಭಿಸಲಾದ್ದು, ಕಾಟಾಚಾರಕ್ಕೆ ಸೀಮಿತ ಆಗಬಾರದು, ತೊಗರಿ ಖರೀದಿಗೆ ಹೆಸರು ನೋಂದಾಯಿಸಿದ ಎಲ್ಲ ರೈತರ ತೊಗರಿ ಖರೀದಿ ಆಗಬೇಕು. ಸರ್ಕಾರದ ಬೆಂಬಲ ಬೆಲೆ ಸಿಗುವಂತಾಗಬೇಕು ಎಂದರು.
ತಾಲೂಕಿನಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ವೃದ್ಧಿಯಾಗಬೇಕು ಎಂದು ಸಚಿವ ಖಂಡ್ರೆ ಶಿಕ್ಷಣ ಇಲಾಖೆ ಬಿಇಓಗೆ ಟಾಸ್ಕ್ ನೀಡಿದರು. ವಾರ್ಷಿಕ ಪರೀಕ್ಷೆ ಸಮೀಪಿಸುತ್ತಿದ್ದು ಬೋಧನಾ ತರಗತಿ, ಮತ್ತಿತರ ವಿನೂತನ ಪ್ರಯೋಗ ಅನುಸರಿಸಿ ಫಲಿತಾಂಶ ಸುಧಾರಿಸಬೇಕು ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಹಣಮಂತರಾವ ಚವ್ಹಾಣ್, ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಕುಡಿಯುವ ನೀರು ಪೂರೈಕೆಗೆ ಅನುದಾನದ ಕೊರತೆಯಿಲ್ಲ. ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನ ನೀಡುತ್ತೇನೆ.
| ಈಶ್ವರ ಖಂಡ್ರೆ ಜಿಲ್ಲಾ ಉಸ್ತುವಾರಿ ಸಚಿವ ಬೀದರ್