ಚಾಮರಾಜನಗರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾರೋತ್ ಅವರು ಹನೂರು ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಎಲ್ಲೇಮಾಳ, ಅಜ್ಜೀಪುರ ಮತ್ತು ರಾಮಾಪುರ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ಹನೂರು ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಿ.ಎನ್.ದೊಡ್ಡಿ ಗ್ರಾಮದಲ್ಲಿ ಕುಡಿಯುವ ನೀರು ಪೂರೈಸುವ ಸಂಬಂಧ ಜಲ ಬಿಂದು ಗುರುತಿಸಲು ವಾಟರ್ ಡಿಟೆಕ್ಟರ್ ಮೂಲಕ ಭೌಗೋಳಿಕ ಸಮೀಕ್ಷೆ ಮಾಡುತ್ತಿರುವುದನ್ನು ವೀಕ್ಷಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದರು. ನಂತರ ಅಜ್ಜೀಪುರ ಗ್ರಾಮದ ಹತ್ತಿರ ಇರುವ ಉಡುತೊರೆ ಹಳ್ಳ ಜಲಾಶಯವನ್ನು ಪರಿವೀಕ್ಷಣೆ ನಡೆಸಿ ಜಲಾಶಯದ ನೀರಿನ ವಸ್ತುಸ್ಥಿತಿ ಪರಿಶೀಲಿಸಿದರು. ಉಡುತೊರೆ ಹಳ್ಳದಲ್ಲಿ ನೀರು ಹರಿಸಿದ್ದಲ್ಲಿ ಅಕ್ಕಪಕ್ಕದ ಕೊಳವೆ ಬಾವಿಗಳಲ್ಲಿ ಅಂತರ್ಜಲ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಅಜ್ಜೀಪುರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಚರ್ಚಿಸಿದರು. ಕುಡಿಯುವ ನೀರಿಗೆ ಯಾವುದೇ ತೊಂದರೆಬಾರದಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಗ್ರಾಮದ ಅಂಗನವಾಡಿ, ಗ್ರಂಥಾಲಯ, ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತದನಂತರ ರಾಮಾಪುರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಎಸ್. ಜಗದೀಶ್, ಹನೂರು ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಕೆ.ಸಿ.ಐ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಕರುಣಾಮಾಯಿ, ಸಹಾಯಕ ನಿರ್ದೇಶಕರಾದ ರಾಧಾ, ಇಂಜಿನಿಯರ್ ಎಂ.ಪೂರ್ಣಿಮಾ, ಎಚ್.ಶಶಿಕುಮಾರ್, ಡಿ.ಪಿ.ಎಂ.ಆಶಾ ಹಾಜರಿದ್ದರು.