ಹನೂರು: ಆರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಸಾಮಾಜಿಕ ಭದ್ರತಾ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಗ್ರೇಡ್-2 ತಹಸೀಲ್ದಾರ್ ಧನಂಜಯ ತಿಳಿಸಿದರು.
ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿಯ ಕುರುಬರದೊಡ್ಡಿ ಗ್ರಾಮದಲ್ಲಿ ಶುಕ್ರವಾರ ಕಂದಾಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಿಂಚಣಿ ಅದಾಲತ್ ಕಾರ್ಯಕ್ರಮ ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾಗಿದೆ. ಸರ್ಕಾರದ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯುವ ಮೂಲಕ ಜನಸ್ನೇಹಿಯಾಗಿದೆ. ಇದರಿಂದ ಅರ್ಜಿಗಳ ವಿಲೇವಾರಿಯೂ ಪಾರದರ್ಶಕವಾಗಿದೆ. ಸ್ಥಳದಲ್ಲಿಯೇ ಸಮಸ್ಯೆಗಳು ನಿವಾರಣೆಯಾಗಲಿವೆ. ಈ ದಿಸೆಯಲ್ಲಿ ಕಾರ್ಯಕ್ರಮವನ್ನು ಗ್ರಾಮದಲ್ಲೇ ಆಯೋಜಿಸಲಾಗಿದೆ. ಸಾಮಾಜಿಕ ಭದ್ರತಾ ಯೋಜನೆಗಳಾದ ಅಂಗವಿಕಲ, ವೃದ್ಧಾಪ್ಯ, ವಿಧವಾ ವೇತನ, ಮನಸ್ವಿನಿ, ಮೈತ್ರಿ ಯೋಜನೆಯಡಿ ಆರ್ಹ ಫಲಾನುಭವಿಗಳು ಸರ್ಕಾರದಿಂದ ಮಾಸಿಕ ಪಿಂಚಣಿ ಪಡೆಯಬಹುದಾಗಿದೆ. ಇದರ ಸೌಲಭ್ಯವನ್ನು ಪಡೆಯದ ಆರ್ಹ ಫಲಾನುಭವಿಗಳು ಕೂಡಲೇ ಅರ್ಜಿ ಸಲ್ಲಿಸಿ ಸರ್ಕಾರದ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.