ಜಿಲ್ಲೆ

ಕೆ.ಎಂ.ಶಿವಲಿಂಗೇಗೌಡ ವಿರುದ್ಧ ಜೆಡಿಎಸ್‌ ವತಿಯಿಂದ ಎಸ್ಪಿಗೆ ದೂರು

Hassan - Mohan Kanthur

ಹಾಸನ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಹಣ ಹಂಚಿಕೆ ಮಾಡುವ ಬಗ್ಗೆ ಮಾತನಾಡಿರುವ ಆಡಿಯೋ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಜಿಲ್ಲಾ ಜೆಡಿಎಸ್‌ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಶುಕ್ರವಾರ ದೂರು ಸಲ್ಲಿಸಲಾಯಿತು.
ಶ್ರೇಯಸ್ ಪಟೇಲ್ ಅವರ ಪರವಾಗಿ ಪ್ರತಿ ಮತದಾರರಿಗೆ 500ರೂ. ಹಂಚಿಕೆ ಮಾಡುವ ಕುರಿತು ಮಾತನಾಡಿರುವ ಆಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಅಕ್ರಮವಾಗಿ 7 ಕೋಟಿಗೂ ಅಧಿಕ ಹಣ ವರ್ಗಾವಣೆಯಾಗಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ಹವಾಲ ಹಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಪಕ್ಷದ ಮುಖಂಡರೊಂದಿಗೆ ಮಾತನಾಡಿರುವ ಸಂಭಾಷಣೆಯಲ್ಲಿ ಸಂಸದ ಶ್ರೇಯಸ್ ಪಟೇಲ್, ಮಾಜಿ ಸಚಿವ ಬಿ.ಶಿವರಾಮ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯಸಭಾ ಸದಸ್ಯ ಚಂದ್ರಶೇಖರ್ ಮತ್ತು ಇನ್ನಿಬ್ಬರ ಹೆಸರು ಪ್ರಸ್ತಾಪವಾಗಿದೆ. ಪ್ರತಿ ಮತದಾರರಿಗೆ 500ರೂ. ಹಣ ಬೇಕು, ಮನೆಗೆ 1,000ರೂ. ಹಂಚಬೇಡಿ ಎಂದು ಶಿವಲಿಂಗೇಗೌಡ ಅವರೇ ಆಡಿಯೋದಲ್ಲಿ ಹೇಳಿದ್ದಾರೆ ಎಂದು ತಿಳಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್ ಅವರು ಮಾತನಾಡಿ, ಕಳೆದ ಲೋಕಸಭೆ ಚುನಾವಣೆ ವೇಳೆ ವಾಮ ಮಾರ್ಗದಿಂದ ಚುನಾವಣೆ ನೀತಿಸಂಹಿತೆ ಉಲ್ಲಂಘಿಸಿ ಚುನಾವಣೆ ಗೆದ್ದಿರುವುದು ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ದಿಂದ ಬಹಿರಂಗವಾಗಿದೆ. ಸಂಸದ ಶ್ರೇಯಸ್ ಪಟೇಲ್, ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ಮಾಜಿ ಸಚಿವ ಬಿ.ಶಿವರಾಮ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಾಜ್ಯಸಭಾ ಸದಸ್ಯ ಚಂದ್ರಶೇಖರ್ ಸೇರಿ ಹಲವರು ಕೋಟ್ಯಾಂತರ ರೂಪಾಯಿ ಹಣ ಹಂಚಿಕೆಯಲ್ಲಿ ಭಾಗಿಯಾಗಿರುವ ಬಗ್ಗೆ ವೈರಲ್ ಆಗಿರುವ ಆಡಿಯೋದಲ್ಲಿ ಉಲ್ಲೇಖ ವಾಗಿದೆ. ಚುನಾವಣಾ ಆಯೋಗ ಇ.ಡಿ. ಸೇರಿ ಇತರೆ ತನಿಖಾ ಸಂಸ್ಥೆಗಳು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಮತದಾರರಿಗೆ ಹಣ ಹಂಚಿರುವ ಬಗ್ಗೆ ಆಡಿಯೋದಲ್ಲಿ ದಾಖಲೆಗಳಿವೆ. ಅವರೆಲ್ಲ ಹಣ ಹೇಗೆ ಬಂತು ಎಂಬ ಬಗ್ಗೆ ತನಿಖೆ ನಡೆಸಬೇಕು ಜೊತೆಗೆ ಚುನಾವಣಾ ಆಯೋಗದ ನೀತಿ ನಿಯಮಗಳನ್ನು ಗಾಳಿಗೆ ತೂರಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಜೆಡಿಎಸ್ ವಕ್ತಾರ ಹೊಂಗೆರೆ ರಘು , ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎಸ್.ದ್ಯಾವೇಗೌಡ, ವಕೀಲ ಪೂರ್ಣಚಂದ್ರ ತೇಜಸ್ವಿ ಇದ್ದರು.