ಹಾಸನ: ಜಿಲ್ಲೆಯ ಏಕೈಕ ಶಾಸಕ ಕೆ.ಎಂ.ಶಿವಲಿಂಗೇಗೌಡರು ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅವರಿಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಪೆ.11ರಂದು ಅದ್ದೂರಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಈ.ಎಚ್. ಲಕ್ಷ್ಮಣ್ ತಿಳಿಸಿದರು.
ನಗರದ ತಾಲೂಕು ಕಚೇರಿ ಪಕ್ಕದ ರಸ್ತೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಹಲವು ಸಚಿವರು ಹಾಗೂ ರಾಜ್ಯದ ನಾಯಕರು, ಜಿಲ್ಲೆಯ ಎಲ್ಲಾ ಮುಂಖಡರು ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸುಮಾರು ಐದರಿಂದ ಆರು ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆ ಇದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಿವಲಿಂಗೇಗೌಡರಿಗೆ ಈ ಬಾರಿ ಸಚಿವ ಸ್ಥಾನ ಸಿಗಲಿಲ್ಲ.ಆದರೆ,ಪಕ್ಷದ ವರಿಷ್ಠರು ಮುಂಬರುವ ಅವಧಿಯಲ್ಲಿ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದು, ಈಗ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ ಈ ಸಂದರ್ಭದಲ್ಲಿ ಜಿಲ್ಲೆಯ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಮತ್ತು ಕಾಂಗ್ರೆಸ್ ಪಕ್ಷದ ವತಿಯಿಂದ ಅದ್ದೂರಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು
ಮುಂಬರುವ ಲೋಕಸಭಾ ಚುನಾವಣೆಗೆ ಹಲವು ಆಕಾಂಕ್ಷಿಗಳಿದ್ದು, ಈಗಾಗಲೇ ಹೈಕಮಾಂಡ್ ಸೂಕ್ತ ಅಭ್ಯರ್ಥಿ ಶೀಘ್ರದಲ್ಲೇಘೋಷಣೆ ಮಾಡಲಿದ್ದಾರೆ.ಪಕ್ಷದಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳಿದ್ದು, ಯಾವುದೇ ರೀತಿ ಬಣ್ಣದ ರಾಜಕೀಯವಿಲ್ಲ,ಯಾರೇ ಅಭ್ಯರ್ಥಿಯಾದರು ನಾವೆಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಮಾಡಿ ಈ ಬಾರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗೆಸ್‌ನ ವಿಜಯ ಪತಾಕೆಯನ್ನು ಹಾರಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಮುಖಂಡರಾದ ವಿಜಯ್‌ಕುಮಾರ್, ಎಚ್.ಕೆ. ಮಹೇಶ್, ಬನವಾಸೆ ರಂಗಸ್ವಾಮಿ, ಶ್ರೀಧರ್‌ಗೌಡ ಇದ್ದರು.