ಜಿಲ್ಲೆ

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಜು. 9ಕ್ಕೆ

ಚಿತ್ರದುರ್ಗ: ದುಡಿಯುವ ವರ್ಗದ ಶ್ರಮಕ್ಕೆ ತಕ್ಕ ಪ್ರತಿಫಲ ನೀಡದ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಜು. 9ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ. ಯಾದವರೆಡ್ಡಿ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಉದ್ಯೋಗ ಸೃಷ್ಟಿಯಾಗಿಲ್ಲ. ರೈತರು, ಕಾರ್ಮಿಕರು, ಮಹಿಳೆಯರು, ವಿದ್ಯಾರ್ಥಿಗಳು ಸೇರಿ ಎಲ್ಲರೂ ಒಂದಲ್ಲೊಂದು ರೀತಿ ತೊಂದರೆ ಅನುಭವಿಸುವಂತಾಗಿದೆ ಎಂದು ದೂರಿದರು.

ವಿಶ್ವವಿದ್ಯಾಲಯ, ಆಸ್ಪತ್ರೆಗಳಲ್ಲಿ ನೇರ ನೇಮಕಾತಿ ಇಲ್ಲ. ಹೊರ ಗುತ್ತಿಗೆ ಮೇಲೆ ಕೆಲಸಕ್ಕೆ ತೆಗೆದುಕೊಳ್ಳುತ್ತಿರುವ ಕಾರಣ ಜೀವನಕ್ಕೆ ಭದ್ರತೆ ಇಲ್ಲದಂತಾಗಿದೆ. ನರೇಗಾ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲಿ ಕೂಲಿ ಕೆಲಸವೂ ಸಿಗದ ಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ಹೊರಹಾಕಿದರು.

ದೇಶಾದ್ಯಂತ ಅಂದು ಪ್ರತಿಭಟನೆ ಹಮ್ಮಿಕೊಂಡಿದ್ದು, ಚಿತ್ರದುರ್ಗದಲ್ಲೂ ರೈತರು, ಕಾರ್ಮಿಕರು ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಜಿ.ಸಿ.ಸುರೇಶ್‌ಬಾಬು ಮಾತನಾಡಿ, ಅಂದು ಬೆಳಗ್ಗೆ 11ಕ್ಕೆ ಯೂನಿಯನ್ ಪಾರ್ಕ್‌ನಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರತಿಭಟನೆ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಸಿ.ಕೆ. ಗೌಸ್‌ಪೀರ್, ಜನಶಕ್ತಿ ರಾಜ್ಯ ಸಮಿತಿ ಸದಸ್ಯ ಟಿ.ಶಫಿವುಲ್ಲಾ, ಟಿ.ಆರ್. ಉಮಾಪತಿ, ಬಿ. ಬಸವರಾಜ್, ಜಯದೇವಮೂರ್ತಿ ಇತರರಿದ್ದರು.