ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ದೇಶದ ಸಾರ್ವಜನಿಕ ಉದ್ದಿಮೆಗಳನ್ನು ಬಂಡವಾಳಶಾಹಿಗಳಿಗೆ ಮಾರುತ್ತಿದ್ದಾರೆ ಎಂದು ಸಿಐಟಿಯು ರಾಜ್ಯ ಅಧ್ಯಕ್ಷೆ ಎಸ್.ವರಲಕ್ಷ್ಮೀ ಆರೋಪಿಸಿದರು.
ಮಂಡ್ಯ ಜಿಲ್ಲಾ ಸಿಐಟಿಯು ಘಟಕದ ನಾಗಮಂಗಲ ಪಟ್ಟಣದ ಬಡಗೂಡಮ್ಮ ದೇವಾಲಯದ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಬೃಹತ್ ರ‌್ಯಾಲಿ ಹಾಗೂ ಜಿಲ್ಲಾ ಮಟ್ಟದ 8ನೇ ಕಾರ್ಮಿಕ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಬೆಲೆ ಏರಿಕೆಯಿಂದ ಬಡವರು, ಕೂಲಿಕಾರ್ಮಿಕರು ಹೈರಾಣರಾಗಿದ್ದಾರೆ. ಒಂದು ಹೊತ್ತಿನ ಅನ್ನಕ್ಕೂ ಪರದಾಡುವಂತಾಗಿದೆ. ತಿನ್ನುವ ಅನ್ನದ ಮೇಲೂ ಜಿಎಸ್‌ಟಿ ವಿಧಿಸಿರುವ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಪಟ್ಟಣದ ಶ್ರೀಸೌಮ್ಯಕೇಶವಸ್ವಾಮಿ ದೇವಾಲಯದ ಆವರಣದಿಂದ ಪಟ್ಟಣದ ಮುಖ್ಯರಸ್ತೆಯಲ್ಲಿ ನೂರಾರು ಸಂಖ್ಯೆಯ ಸಿಐಟಿಯು ಕಾರ್ಯಕರ್ತೆಯರು ಬೃಹತ್ ಮೆರವಣಿಗೆ ರ‌್ಯಾಲಿ ನಡೆಸಿದರು.
ಸಿಐಟಿಯು ಜಿಲ್ಲಾಧ್ಯಕ್ಷ ಶಿವಕುಮಾರ್, ಮಂಡ್ಯ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ ಮಾತನಾಡಿದರು. ರಾಜ್ಯ ಸಮಿತಿ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ಗ್ರಾಮ ಪಂಚಾಯಿತಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ, ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಲತಾ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಪ್ರಮೀಳಾಕುಮಾರಿ, ಕಾರ್ಯದರ್ಶಿ ಜಯಲಕ್ಷ್ಮಮ್ಮ, ರೈತ ಮುಖಂಡ ಟಿ.ಎಲ್.ಕೃಷ್ಣೇಗೌಡ ಸೇರಿದಂತೆ ಮತ್ತಿತರಿದ್ದರು.