ಜಿಲ್ಲೆ

ಕೇಂದ್ರದ ಯೋಜನೆಗೆ ಸಿಎಂ ಚಾಲನೆ

ರಾಜ್ಯ ಸರ್ಕಾರದ ಕೊಡುಗೆ ಶೂನ್ಯ ಎಂದು ಹರಿಹಾಯ್ದ ಶಾಸಕ ಸುರೇಶ್​ಗೌಡ

ತುಮಕೂರು: ಕೇಂದ್ರ ಸರ್ಕಾರ ಹಾಗೂ ಹಿಂದಿನ ಬಿಜೆಪಿ ಸರ್ಕಾರದ ಯೋಜನೆಗಳು ಹಾಗೂ ಗಣಿಬಾಧಿತ ಪ್ರದೇಶದ ಅಭಿವೃದ್ಧಿಗೆ ಮೀಸಲಾಗಿರುವ ಅನುದಾನದ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮಾಡಲು ಸಿಎಂ ಸಿದ್ದರಾಮಯ್ಯ ಜಿಲ್ಲೆಗೆ ಬರುತ್ತಿದ್ದು, ಇದರಲ್ಲಿ ರಾಜ್ಯ ಸರ್ಕಾರದ ಕೊಡುಗೆ ಶೂನ್ಯ ಎಂದು ಶಾಸಕ ಬಿ.ಸುರೇಶ್​ಗೌಡ ಹರಿಹಾಯ್ದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದ ಕೊನೆಯ ದಿನಗಳನ್ನು ಎಣಿಸುತ್ತಿರುವ ಸಿದ್ದರಾಮಯ್ಯ ಅವರು ಅಸ್ತಿತ್ವ ಉಳಿಸಿಕೊಳ್ಳಲು ನಡೆಸುತ್ತಿರುವ ಬೋಗಸ್​ ಕಾರ್ಯಕ್ರಮ ಇದಾಗಿದೆ. ಸಿಎಂ ಕಾರ್ಯಕ್ರಮದಲ್ಲಿ ನಾವೆಲ್ಲರೂ ಪ್ರತಿಭಟನೆ ಮಾಡುತ್ತೇವೆ ಎಂದು ಪುನರುಚ್ಚರಿಸಿದರು.

ಸಿಎಂ ಕಾರ್ಯಕ್ರಮಗಳಲ್ಲಿ ಸ್ಥಳಿಯ ಸಂಸ್ಥೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ 253 ಕೋಟಿ ರೂ. ಯೋಜನೆ ಕೇಂದ್ರ ಸರ್ಕಾರದ ಅಮೃತ್​ ಯೋಜನೆ, ಗಣಿಬಾಧಿತ ಅನುದಾನದಲ್ಲಿ ರಸ್ತೆ, ಶಾಲೆ, ಅಂಗನವಾಡಿ ಕಟ್ಟಡ ನಿಮಾರ್ಣ ಕಾಮಗಾರಿ, ಕೇಂದ್ರ ಸರ್ಕಾರದ ಜಲಜೀವನ್​ ಮಿಷನ್​ ಯೋಜನೆಯಡಿ ಗುಬ್ಬಿ, ಕೊರಟಗೆರೆ, ಕುಣಿಗಲ್​, ಮಧುಗಿರಿ, ಶಿರಾ, ತಿಪಟೂರು, ತುಮಕೂರು ಮತ್ತು ತುರುವೇಕೆರೆ ತಾಲೂಕುಗಳಲ್ಲಿ ಕುಡಿಯುವ ನೀರಿನ ಶಂಕುಸ್ಥಾಪನೆ ಮಾಡುತ್ತಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರದ ಪಾಲು ಇಲ್ಲ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿಶಂಕರ್​ ಮಾತನಾಡಿ, ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಹಳ್ಳಿಗಳಿಂದ ಜನರನ್ನು ಕರೆತರಲು ಗ್ರಾಪಂ ಅಧಿಕಾರಿಗಳಿಗೆ ಹೊಣೆ ನೀಡಲಾಗಿದೆ. 750 ಬಸ್​ಗಳ ಮೂಲಕ ಜನರನ್ನು ಕರೆತರಲು ಅದರ ವೆಚ್ಚವನ್ನು 15ನೇ ಹಣಕಾಸು ಆಯೋಗ ಮತ್ತು ರಾಜ್ಯ ಹಣಕಾಸು ಆಯೋಗದ ಅನುದಾನ ಹೊರತುಪಡಿಸಿ ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಸ್ವಂತ ಸಂಪನ್ಮೂಲದಿಂದ ನಿಯಮಾನುಸಾರ ಭರಿಸಲು ಅನುಮೋದನೆ ನೀಡಿದೆ ಎಂದು ಸರ್ಕಾರ ಸುತ್ತೋಲೆಹೊರಡಿಸಿದೆ ಎಂದು ತಿಳಿಸಿದರು.

ಕ್ರಿಕೆಟ್​ ಸ್ಟೇಡಿಯಂ ನಿರ್ಮಾಣಕ್ಕೆ ಅಪಸ್ವರ!: ತುಮಕೂರು ಗ್ರಾಮಾಂತರ ಕ್ಷೇತ್ರ ರೈತರ ಜಮೀನು ಕಸಿದು ಕೊಂಡು ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್​ ಸ್ಟೇಡಿಯಂ ನಿರ್ಮಿಸಲು ಮುಂದಾಗಿರುವ ಸರ್ಕಾರದ ನಡೆಗೆ ಪ್ರತಿಕ್ರಿಯಿಸಿದ ಶಾಸಕ ಬಿ.ಸುರೇಶ್​ಗೌಡ, ಕ್ರೀಡಾಂಗಣ ನಿರ್ಮಾಣದಿಂದ ಕ್ರಿಕೆಟ್​ ಅಕಾಡೆಮಿಗಳಿಗೆ ಉಪಯೋಗವಾಗಬಹುದು ಹೊರತು ಸ್ಥಳಿಯ ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಆದರೆ, ಕ್ರಿಕೆಟ್​ ಸ್ಟೇಡಿಯಂ ಬಗ್ಗೆ ನಮ್ಮ ವಿರೋಧವಿಲ್ಲ. ಆದರೆ, ತುಮಕೂರು ವಿವಿ "ಜ್ಞಾನಸಿರಿ' ಕ್ಯಾಂಪಸ್​ಗೆ ಮೂಲಸೌಕರ್ಯ ಒದಗಿಸಬೇಕು ಎಂಬ ನಮ್ಮ ಆಗ್ರಹಕ್ಕೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಎತ್ತಿನಹೊಳೆ ಯೋಜನೆಯಡಿ ಲಭ್ಯವಿರುವ ಕೆರೆಗಳಿಗೆ ನೀರು ಹರಿಸಲು ಸರ್ಕಾರ ಆದ್ಯತೆ ನೀಡಬೇಕಾಗಿತ್ತು. ಬಡವರಿಗೆ ಮನೆಗಳನ್ನು ಕೊಡಬೇಕಾಗಿತ್ತು. ಆದ್ಯತಾ ಕಾರ್ಯಕ್ರಮಗಳನ್ನು ರ್ನಿಲಕ್ಷ$್ಯ ಮಾಡಿರುವ ಸರ್ಕಾರ, ಬಿಟ್ಟಿ ಭಾಗ್ಯಗಳ ಮೂಲಕ ಜನರ ದಿಕ್ಕು ತಪ್ಪಿಸುತ್ತಿದೆ ಎಂದರು.

ವಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡದೆ ಸಿದ್ದರಾಮಯ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆಗೆ ತುಮಕೂರಿಗೆ ಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಜಿಲ್ಲೆಯ ಬಿಜೆಪಿ, ಜೆಡಿಎಸ್​ ಶಾಸಕರು ಪ್ರತಿಭಟನೆ ನಡೆಸಲಿದ್ದೇವೆ. ಅನುದಾನ ತಾರತಮ್ಯ ವಿರೋಧಿಸಿ ಕಾರ್ಯಕ್ರಮ ಬಹಿಷ್ಕರಿಸುತ್ತೇವೆ.| ಬಿ.ಸುರೇಶ್​ಗೌಡ, ಬಿಜೆಪಿ ಶಾಸಕ