ಜಿಲ್ಲೆ

ಕೇಂದ್ರದ ವಿರುದ್ಧ ಹಾಸನದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಹಾಸನ: ರಾಜ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರ್ಕಾರ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಕಾರರು ಕೈಯಲ್ಲಿ ಖಾಲಿ ತಟ್ಟೆ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾ ಮೂಲಕ ಆಹಾರದ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ತಂದಿದ್ದ ಯೋಜನೆಗೆ ಇಲ್ಲದ ಸಬೂಬು ಹೇಳಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಗುಡುಗಿದರು.

ಒಕ್ಕೂಟ ವ್ಯವಸ್ಥೆಯಲ್ಲಿ ಕೊಟ್ಟು ತೆಗೆದುಕೊಳ್ಳುವ ಪದ್ಧತಿ ಇದೆ. ರಾಜ್ಯದಿಂದ ಕೇಂದ್ರಕ್ಕೆ ಕೋಟ್ಯಂತರ ರೂಪಾಯಿ ತೆರಿಗೆ ಹಣ ಪಡೆದು ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿರುವ ಕೇಂದ್ರ ಸರ್ಕಾರದ ನಡೆ ಖಂಡನೀಯ. ನಮ್ಮ ಹಣ ಪಡೆದು ನಮಗೆ ವಂಚಿಸುವ ಕೇಂದ್ರ ಸರ್ಕಾರದ ವಿರುದ್ಧ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯಕ್ಕೆ ಅಕ್ಕಿ ವಿತರಣೆಯಲ್ಲಿ ತೋರಿರುವ ಮಲತಾಯಿ ಧೋರಣೆಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಬಿಜೆಪಿಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ. ಬಡವರ ಹಸಿವು ನೀಗಿಸುವ ನಿಟ್ಟಿನಲ್ಲಿ ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದ ವೇಳೆ ಆಹಾರ ಸಂರಕ್ಷಣಾ ಕಾಯ್ದೆ (ಫುಡ್ ಸೆಕ್ಯುರಿಟಿ ಆಕ್ಟ್) ಜಾರಿಗೆ ತಂದು, ಪ್ರತಿ ಕುಟುಂಬಕ್ಕೆ 5 ಕೆ.ಜಿ. ಅಕ್ಕಿ ಸಿಗುವಂತೆ ಮಾಡಿದ್ದರು. ಆದರೆ, ಕೆಲವರು ಈ ಯೋಜನೆಯನ್ನು ಮೋದಿ ಜಾರಿಗೆ ತಂದಿದ್ದು ಎಂದು ಬಿಂಬಿಸಿ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಜನರಿಗೆ ಅಕ್ಕಿ ನೀಡುವ ಯೋಜನೆ ಮುಂದುವರೆಸಿಕೊಂಡು ಹೋಗುವ ಬದಲಾಗಿ ಅದಕ್ಕೂ ಕನ್ನ ಹಾಕಿ ಇದೀಗ ಬಡವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ರಾಜ್ಯಕ್ಕೆ ಕೇಂದ್ರದಿಂದ ಬರಬೇಕಿದ್ದ 5 ಸಾವಿರ ಕೋಟಿ ಹಣವನ್ನು ನೀಡದೆ ವಂಚಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯದ ಜನ ಎಚ್ಚೆತ್ತುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಬುಡ ಸಮೇತ ಕಿತ್ತು ಹಾಕುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಈ.ಎಚ್. ಲಕ್ಷ್ಮಣ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪ್ರಚಂಡ ಬಹುಮತ ಗಳಿಸಿದ ಹಿನ್ನೆಲೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಯೋಜನೆಗಳನ್ನು ಹತ್ತಿಕ್ಕುವ ಹುನ್ನಾರ ಮಾಡಿದೆ. ರಾಜಕೀಯ ದ್ವೇಷಕ್ಕೆ ರಾಜ್ಯದ ಬಡವರ ಹೊಟ್ಟೆಯ ಮೇಲೆ ಹೊಡೆಯುವ ಮೂಲಕ ಬಡವರ ಶಾಪಕ್ಕೆ ಬಿಜೆಪಿ ತುತ್ತಾಗಲಿದೆ. ಈಗಾಗಲೇ ಕರ್ನಾಟಕದಲ್ಲಿ ಹೀನಾಯ ಸೋಲು ಅನುಭವಿಸಿರುವ ಬಿಜೆಪಿ ಇದೇ ರೀತಿ ರಾಜಕೀಯ ದ್ವೇಷ ಸಾಧಿಸಲು ಮುಂದಾದರೆ ಮುಂದೆ ತಕ್ಕ ಪಾಠ ಕಲಿಸಲಿದ್ದೇವೆ ಎಂದರು.

ಪ್ರತಿಭಟನೆಯಲ್ಲಿ ರಾಜ್ಯಸಭಾ ಮಾಜಿ ಸದಸ್ಯ ಎಚ್.ಕೆ.ಜವರೇಗೌಡ, ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡ, ಜಿಲ್ಲಾ ಮಾಧ್ಯಮ ವಕ್ತಾರ ದೇವರಾಜೇಗೌಡ, ಮಹಿಳಾ ಅಧ್ಯಕ್ಷೆ ತಾರಾ ಚಂದನ್, ಯುವ ಕಾಂಗ್ರೆಸ್ ಅಧ್ಯಕ್ಷ ರಂಜಿತ್ ಗೊರೂರು, ಎಸ್ಸಿ- ಎಸ್ಟಿ ವಿಭಾಗದ ಅಧ್ಯಕ್ಷ ಮಲ್ಲಿಗೆವಾಳು ದೇವಪ್ಪ, ನಾಯಕರಹಳ್ಳಿ ಅಶೋಕ್ ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.