ಮದ್ದೂರು: ನಾಗಮಂಗಲ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಆರೊಪಿಸಿದರು.
ತಾಲೂಕಿನ ಕೊಪ್ಪ ಹೋಬಳಿಯ ಕೌಡ್ಲೆ, ಹೊಸಗಾವಿ, ಬಿದರಕೋಟೆ, ಮರಳಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಮಂಗಳವಾರ ಬಿಜೆಪಿ ಅಭ್ಯರ್ಥಿ ಸುಧಾ ಶಿವರಾಮೇಗೌಡರ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು. ನಾಗಮಂಗಲ ಕ್ಷೇತ್ರಕ್ಕೆ ಕೊಪ್ಪ ಸೇರಿದ ಮೇಲೆ ಯಾವುದೇ ಅಭಿವೃದ್ಧಿ ಕಂಡಿಲ್ಲ. ನಾವು ಅಧಿಕಾರಕ್ಕೆ ಬಂದ ತಕ್ಷಣ ಕೊಪ್ಪ ಹೋಬಳಿಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಅಭಿವೃದ್ಧಿ ಕಂಡಿದೆ. ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ವಿಶ್ವದ ಮುಂಚೂಣಿ ಸ್ಥಾನದಲ್ಲಿರುವುದು ಪ್ರತಿಯೊಬ್ಬರೂ ಹೆಮ್ಮೆಪಡುವಂತಹ ವಿಷಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬಿಜೆಪಿ ಅಭ್ಯರ್ಥಿ ಸುಧಾ ಶಿವರಾಮೇಗೌಡ ಮಾತನಾಡಿ, ಪತಿ ಶಿವರಾಮೇಗೌಡ, ಪುತ್ರ ಚೇತನ್‌ಗೌಡ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಂಡು ನಿರಂತರವಾಗಿ ಕ್ಷೇತ್ರ ಹಾಗೂ ಜನರ ಸಮಸ್ಯೆ ಬಗೆಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಬಾರಿ ನನ್ನನ್ನು ಗೆಲ್ಲಿಸುವ ಮೂಲಕ ಶಾಸನಸಭೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು ಎಂದು ಕೋರಿದರು.
ಇದಕ್ಕೂ ಮುನ್ನ ಕೌಡ್ಲೆ ಗ್ರಾಮದ ಪಟ್ಟಲದಮ್ಮ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪೂರ್ಣಕುಂಭ ಮೆರವಣಿಗೆಯೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಯುವ ಮುಖಂಡ ಚೇತನ್‌ಶಿವರಾಮೇಗೌಡ, ಅನಿಲ್, ರಮೇಶ್ ಇತರರು ಇದ್ದರು.