ಹಾಸನ: ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಪ್ರಕರಣಗಳು ಕಂಡು ಬಂದಿಲ್ಲ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಹೊರ ಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುವ ಹಾಗೂ ವಲಸೆ ಬರುವವರ ಬಗ್ಗೆ ನಿಗಾವಹಿಸಿ ಎಂದು ತಿಳಿಸಿದರು.
ಬೆಡ್‌ಗಳ ವ್ಯವಸ್ಥೆ, ಅಗತ್ಯ ಔಷಧಿಗಳ ದಾಸ್ತಾನಿಗೆ ಕ್ರಮವಹಿಸಿ ಎಂದರಲ್ಲದೆ, ಅಂಬುಲೆನ್ಸ್ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದರ ಜೊತೆಗೆ ಆಕ್ಸಿಜನ್ ಪ್ಲಾಂಟ್ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸರ್ಕಾರದ ಮಾರ್ಗಸೂಚಿಯಂತೆ ನಿಗದಿತ ಪರೀಕ್ಷೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಶೀತ, ನೆಗಡಿ, ಕೆಮ್ಮು ಸಾಮಾನ್ಯವಾಗಿ ಬರುತ್ತದೆ ಅದಕ್ಕೆ ಹೆದರುವುದು ಬೇಡ ಮುನ್ನೆಚ್ಚರಿಕೆಯಿಂದ ಚಿಕಿತ್ಸೆ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.
ಗರ್ಭಿಣಿ ಸ್ತ್ರೀಯರು, ಬಾಣಂತಿಯರು, ವೃದ್ದರು, ಮಕ್ಕಳಿಗೆ ಹಾಲುಣಿಸುವ ತಾಯಂದಿರು ಆರೋಗ್ಯದ ಕಡೆ ಹೆಚ್ಚು ಗಮಹರಿಸುವಂತೆ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಶಂಕರ್, ಹಿಮ್ಸ್ ಅಧೀಕ್ಷಕ ಡಾ.ಕೃಷ್ಣಮೂರ್ತಿ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.