ಹಾಸನ: ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಅಂತಹ ಸ್ಥಳಗಳಲ್ಲಿ ಕಾನೂನು ಅರಿವು ಮೂಡಿಸಿ ಪ್ರಕರಣಗಳು ಹೆಚ್ಚಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮಿತಿಗಳ ಸಭೆ ನಡೆಸಿದ ಅವರು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಪರಿಣಾಮಕಾರಿ ಕೌನ್ಸಿಲಿಂಗ್ ನಡೆಸಬೇಕು. ಸಖಿ ಒನ್ ಸ್ಟಾಪ್ ಸೆಂಟರ್ ಕುರಿತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಲು ಶಾಲಾ ಮಟ್ಟದಲ್ಲಿ ಜಾಗೃತಿ ಜಾಥಾ ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚು ಹಮ್ಮಿಕೊಳ್ಳಬೇಕು. ಕೌಶಲ್ಯ ಅಭಿವೃದ್ಧಿ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಸ್ವಾಧಾರ ಗೃಹಗಳ ಮೂಲಕ ಮಹಿಳೆಯರು ತಯಾರಿಸಿದ ವಸ್ತುಗಳನ್ನು ಮಾರಾಟ ಮಾಡಲು ಸೂಕ್ತ ಕ್ರಮವಹಿಸಬೇಕು ಹಾಗೂ ಕರಕುಶಲ ಉತ್ಪನ್ನಗಳ ಬಗ್ಗೆ ಹೆಚ್ಚಿನ ಮಾರುಕಟ್ಟೆ ಪ್ರಚಾರ ನಡೆಸಬೇಕು ಎಂದು ನಿರ್ದೇಶನ ನೀಡಿದರು.
ಉದ್ಯೋಗಸ್ಥ ಮಹಿಳೆಯರ ವಸತಿ ನಿಲಯಗಳ ಸೌಲಭ್ಯ ಕುರಿತು ಸಿದ್ಧ ಉಡುಪುಗಳ ಕಾರ್ಖಾನೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ವ್ಯಾಪಕ ಪ್ರಚಾರ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆದ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ. ರವಿಕಾಂತ್ ಮಾತನಾಡಿ, ನೊಂದ ಮಹಿಳೆಯರ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಲು ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು. ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರೆಯುವವರೆಗೂ ಅಧಿಕಾರಿಗಳು ಅವರ ಜೊತೆ ಇದ್ದು ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎ. ಉಸ್ಮಾನ್ ಮತ್ತಿತರರ ಅಧಿಕಾರಿಗಳು ಭಾಗವಹಿಸಿದ್ದರು.