ಚಾಮರಾಜನಗರ: ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳ ಕ್ರಿಯಾಶೀಲ ಕಲಿಕೆಗೆ ಕಲಿಕಾ ಹಬ್ಬ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಮಹದೇವಸ್ವಾಮಿ ಹೇಳಿದರು.
ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ ಸೋಮವಾರ ಆಯೋಜಿಸಿದ್ದ 2024-25 ನೇ ಸಾಲಿನ ಉರ್ದು ಕ್ಲಸ್ಟರ್ ಮಟ್ಟದ ಎಫ್‌ಎಲ್ಎನ್ ಆಧಾರಿತ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಶಾಲಾ ಶಿಕ್ಷಣ ಇಲಾಖೆ ಸರ್ಕಾರಿ ಶಾಲಾ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರುತ್ತಿದೆ. ಈ ವರ್ಷ ಕಲಿಕಾ ಹಬ್ಬ ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದು, ಮಕ್ಕಳ ಚಟುವಟಿಕೆಯುಕ್ತ ಕಲಿಕೆಗೆ ಈ ಕಾರ್ಯಕ್ರಮ ಅತ್ಯಂತ ಸಹಕಾರಿಯಾಗಿದೆ. ಈ ಚಟುವಟಿಕೆಗಳಲ್ಲಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಕ್ಷೇತ್ರ ಸಂಪನ್ಮೂಲ ಅಧಿಕಾರಿ ಪಿ.ರಾಜೀವ್ ಮಾತನಾಡಿ, ಕಲಿಕಾ ಹಬ್ಬದ ಚಟುವಟಿಕೆಯೊಂದರಲ್ಲಿ ಪಾಲಕರು ಮತ್ತು ಮಕ್ಕಳಿಗಾಗಿ ಮೋಜಿನ ಆಟವನ್ನೂ ಆಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಪಾಲಕರು ಮಕ್ಕಳಿಗೆ ಸಹಕಾರ ನೀಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ಅಧಿಕಾರಿ ವೈ.ಎಸ್.ಮಹದೇವಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ಪ್ರಧಾನ ಕಾರ್ಯದರ್ಶಿ ಎನ್.ಸುಧಾ, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಎಂ.ಡಿ.ಮಹದೇವಯ್ಯ, ಸಿಆರ್‌ಪಿ ಐಷಾ ಖಾನಂ, ಎಸ್‌ಡಿಎಂಸಿ ಅಧ್ಯಕ್ಷ ಶೇಕ್ ಹಮೀದ್ ಹಾಗೂ ಇತರರು ಉಪಸ್ಥಿತರಿದ್ದರು.