ಚನ್ನರಾಯಪಟ್ಟಣ: ಕ್ರೀಡಾ ಸಾಧನೆಯಲ್ಲಿ ತೊಡಗುವ ವಿದ್ಯಾರ್ಥಿಗಳು ಉದ್ಯೋಗದಲ್ಲಿ ಮೀಸಲಾತಿ ಸಹಿತ ಅನೇಕ ಪ್ರಯೋಜನಗಳನ್ನು ಪಡೆಯಬಹುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಹಯೋಗದಲ್ಲಿ ಚನ್ನರಾಯಪಟ್ಟಣ ವಿಭಾಗ ಹಾಗೂ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ 2023-24ನೇ ಸಾಲಿನ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದ ಕ್ರೀಡಾಪಟುಗಳೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಸರ್ಕಾರದಿಂದ ಸಿಗುವ ಎಲ್ಲ ಸವಲತ್ತುಗಳನ್ನು ಬಳಸಿಕೊಳ್ಳಬೇಕೆಂದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ್ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಗ್ರಾಮಾಂತರ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಸಂತೋಷ್.ಎಲ್, ತಾಲೂಕು ಕಸಾಪ ಅಧ್ಯಕ್ಷ ಹಡೇನಹಳ್ಳಿ ಲೋಕೇಶ್, ಕರ್ನಾಟಕ ರಾಜ್ಯ ಶಿಕ್ಷಕರ ಸಂಘದ ಸಂಘಟನಾ ಸಹ ಕಾರ್ಯದರ್ಶಿ ದೇವರಾಜೇಗೌಡ ತಂಡಗಳ ಪರಿಚಯ ಮಾಡಿಕೊಂಡರು. ಬಿಜಿಎಸ್ ಶಾಲೆಯ ವಿದ್ಯಾರ್ಥಿ ಪ್ರತಿಜ್ಞಾವಿಧಿ ಬೋಧಿಸಿದರು.
ಸನ್ಮಾನ: ನಿವೃತ್ತ ದೈಹಿಕ ಶಿಕ್ಷಣ ಉಪನಿರ್ದೇಶಕ ವೆಂಕಟೇಶಮೂರ್ತಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಭೀಮೇಶ್, ಕಂಬೇಗೌಡ, ರಂಗಸ್ವಾಮಿ, ಎನ್.ಬೋರೇಗೌಡ ಅವರನ್ನು ಸನ್ಮಾನಿಸಲಾಯಿತು.
ಕ್ರೀಡಾಕೂಟದಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಅನಿಲ್ ಕುಮಾರ್, ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸಿ.ಎನ್.ವೆಂಕಟೇಶ್, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್.ಅನಿಲ್ ಕುಮಾರ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಚಲುವನಾರಾಯಣಸ್ವಾಮಿ, ಮಲ್ಲೇಗೌಡ, ವಳಗೆರಳ್ಳಿ ಮಂಜಣ್ಣ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇವ್, ಕ್ರೀಡಾಕೂಟದ ಸಂಘಟನಾ ಅಧ್ಯಕ್ಷ ಕೆ.ಟಿ.ಆನಂದ್, ಕಾರ್ಯದರ್ಶಿ ಡಿ.ಬಿ.ಮಂಜುನಾಥ್, ಖಜಾಂಚಿ ತೆನಿಯಲ್ ರೋನಾಲ್ಡ್ ಉಪಸ್ಥಿತರಿದ್ದರು.