ಮದ್ದೂರು: ಪಟ್ಟಣದ ತಾಲೂಕು ಕ್ರೀಡಾಂಗಣ ಅಭಿವೃದ್ಧಿಗೆ 7 ಕೋಟಿ ರೂ. ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕು ಕ್ರೀಡಾಂಗಣಕ್ಕೆ ಅಧಿಕಾರಿಗಳೊಂದಿಗೆ ಮಂಗಳವಾರ ಆಗಮಿಸಿ, ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಂಗಣವನ್ನು ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ತಾಲೂಕು ಕ್ರೀಡಾಂಗಣವನ್ನು ಸಮಗ್ರ ಅಭಿವೃದ್ಧಿ ಮಾಡುವಂತೆ ಸಾರ್ವಜನಿಕರು ಹಾಗೂ ಕ್ರೀಡಾಪಟುಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಕ್ರೀಡಾಂಗಣ ಅಭಿವೃದ್ಧಿ ಸಂಬಂಧ ಕ್ರಿಯಾ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.
ಮೊದಲ ಹಂತವಾಗಿ ಒಳಾಂಗಣ ಕ್ರೀಡಾಂಗಣದ ಸಿಂಥೆಟಿಕ್ ಮ್ಯಾಟ್ ಅಳವಡಿಸುವುದು, ವಿದ್ಯುತ್ ಅವ್ಯವಸ್ಥೆ ಸರಿಪಡಿಸುವುದು, ಶೌಚಗೃಹಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಮಾಡುವುದು. ಛಾವಣಿಯ ಕೆಲವು ಭಾಗಗಳಲ್ಲಿ ಮಳೆಯ ನೀರು ಸೋರುತ್ತಿದ್ದು, ಅವುಗಳನ್ನು ಸರಿಪಡಿಸಿ ಮೇಲ್ದರ್ಜೆಗೇರಿಸಲಾಗುವುದು ಎಂದರು.
ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುವ ವೇದಿಕೆ ಹಾಗೂ ಅಕ್ಕಪಕ್ಕ ಪ್ರೇಕ್ಷಕರು ಕುಳಿತುಕೊಳ್ಳುವ ಸ್ಥಳ ಕಿರಿದಾಗಿರುವುದರಿಂದ ಕಾರ್ಯಕ್ರಮಗಳನ್ನು ಮಾಡಲು ಸಮಸ್ಯೆಯಾಗುತ್ತಿದೆ. ವೇದಿಕೆ ಆಧುನೀಕರಣ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗುವುದು. ಕ್ರೀಡಾಂಗಣದ ಸಮಗ್ರ ಅಭಿವೃದ್ಧಿ ಮಾಡುವ ಮೂಲಕ ಸಾರ್ವಜನಿಕರಿಗೆ, ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಪುರಸಭಾ ಸದಸ್ಯ ಎಂ.ಬಿ.ಸಚಿನ್, ಲೋಕೋಪಯೋಗಿ ಇಲಾಖೆಯ ಸಿಬ್ಬಂದಿ ದೇವಾನಂದ್, ಹನುಮಂತು, ರಮೇಶ್, ಮುಖಂಡರಾದ ಯರಗನಹಳ್ಳಿ ಹರೀಶ್, ವಿಜ, ಫೈರೋಜ್ ಇದ್ದರು.
ವಿಜಯವಾಣಿ ವರದಿ ಪರಿಣಾಮ
‘ಸಮಸ್ಯೆಗಳ ಕೂಪ ತಾಲೂಕು ಕ್ರೀಡಾಂಗಣ’ ಶೀರ್ಷಿಕೆಯಡಿ ‘ವಿಜಯವಾಣಿ’ ಜೂನ್.8 ರಂದು ವಿಶೇಷ ವರದಿ ಪ್ರಕಟಿಸಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಗಮನ ಸೆಳೆದಿತ್ತು. ಈ ಹಿನ್ನೆಲೆಯಲ್ಲಿ ಶಾಸಕ ಕೆ.ಎಂ.ಉದಯ್ ಅಧಿಕಾರಿಗಳೊಂದಿಗೆ ಮಂಗಳವಾರ ಆಗಮಿಸಿ ತಾಲೂಕು ಕ್ರೀಡಾಂಗಣದಲ್ಲಿರುವ ಸಮಸ್ಯೆಗಳನ್ನು ಪರಿಶೀಲನೆ ನಡೆಸಿ ಸರ್ಕಾರಕ್ಕೆ 7 ಕೋಟಿ ರೂ. ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸುವ ಮೂಲಕ ಕ್ರೀಡಾಂಗಣದ ಅಭಿವೃದ್ಧಿಗೆ ಮುಂದಾಗಿದ್ದಾರೆ.