ಆಲೂರು: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಯಬೇಕು. ಬೌದ್ಧಿಕ ಮಟ್ಟದ ಜತೆಗೆ ದೈಹಿಕ ಬೆಳವಣಿಗೆ ಕೂಡ ಅವಶ್ಯಕ. ಕ್ರೀಡಾಕೂಟಗಳಿಂದ ವಿದ್ಯಾರ್ಥಿಗಳಲ್ಲಿ ಪರಸ್ಪರ ಸಂಪರ್ಕ, ಗೆಳೆತನ ಹೆಚ್ಚಾಗುತ್ತದೆ. ಶಿಕ್ಷಣ ಇಲಾಖೆ ಕ್ರೀಡೆಗೆ ಹೆಚ್ಚಿನ ಆದ್ಯತೆ ಕಲ್ಪಿಸಬೇಕು ಎಂದು ಆಲೂರು ಲಯನ್ಸ್ ಸೇವಾ ಸಂಸ್ಥೆಯ ಅಧ್ಯಕ್ಷ ಎಚ್.ಜಿ.ಪ್ರವೀಣ್ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಬಹುಮಾನಕ್ಕೆ 5000 ರೂ.ಗಳನ್ನು ಆಲೂರು ಲಯನ್ಸ್ ಕ್ಲಬ್ ವತಿಯಿಂದ ಪ್ರೋತ್ಸಾಹ ಧನವನ್ನಾಗಿ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ದೈಹಿಕ, ಮಾನಸಿಕವಾಗಿ ಕ್ರೀಡೆಗಳಲ್ಲಿ ಭಾಗವಹಿಸಲು ಮುಂಚೂಣಿಯಲ್ಲಿರಬೇಕು. ನಮ್ಮ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂತಹ ಕ್ರೀಡಾಕೂಟಗಳು ನಡೆಯಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರೀಡೆಗಳನ್ನು ಪ್ರೋತ್ಸಾಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಪ್ರಾಂಶುಪಾಲೆ ಶ್ವೇತಾ, ಆಲೂರು ಲಯನ್ಸ್ ಸೇವಾ ಸಂಸ್ಥೆಯ ಕಾರ್ಯದರ್ಶಿ ಟಿ.ಆರ್.ಆನಂದ್, ಖಜಾಂಚಿ ಗಿರೀಶ್, ಮಾಜಿ ಅಧ್ಯಕ್ಷ ದಡದಳ್ಳಿ ನವೀನ್, ಹುಣಸುವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವೆಂಕಟೇಶ್, ರುದ್ರೇಶ್ ಇತರರು ಇದ್ದರು.