ಜಿಲ್ಲೆ

ಕ್ರೀಡೆಯಲ್ಲಿ ಹೆಚ್ಚಿನ ಪ್ರೋತ್ಸಾಹ ಅಗತ್ಯ

ಚಾಮರಾಜನಗರ: ಜಿಲ್ಲೆಯಲ್ಲಿರುವ ವಿದ್ಯಾರ್ಥಿಗಳು ಇತ್ತೀಚೆಗೆ ಅಥ್ಲೇಟಿಕ್ ವಿಭಾಗದಲ್ಲಿ ರಾಜ್ಯಮಟ್ಟವನ್ನು ಪ್ರತಿನಿಧಿಸುತ್ತಿದ್ದು, ಜಂಪ್‌ರೋಪ್ ಮತ್ತು ಇನ್ನಿತರೆ ಕ್ರೀಡೆಗಳಲ್ಲಿ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಹನೂರು ಶಾಸಕ ಎಂ.ಆರ್.ಮಂಜುನಾಥ್ ಅಭಿಪ್ರಾಯಪಟ್ಟರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜುಗಳ 2024-25ನೇ ಸಾಲಿನ ರಾಜ್ಯ ಮಟ್ಟದ ಜಂಪ್‌ರೋಪ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದರು.

ನಮ್ಮ ಜಿಲ್ಲೆಯಲ್ಲಿ ರಾಜ್ಯಮಟ್ಟದ ಜಂಪ್‌ರೋಪ್ ಕ್ರೀಡಾಕೂಟವನ್ನು ಆಯೋಜನೆ ಮಾಡುತ್ತಿರುವುದು ಚಾಮರಾಜನಗರದ ಹೆಮ್ಮೆಯನ್ನು ಹೆಚ್ಚಿಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲೂ ತನ್ನದೇ ಆದ ಪ್ರತಿಭೆ ಇದೆ. ನಮ್ಮ ಜಿಲ್ಲೆಯಿಂದಲೂ ಇತ್ತೀಚೆಗೆ ಹಲವಾರು ವಿದ್ಯಾರ್ಥಿಗಳು ಅಥ್ಲೇಟಿಕ್ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹದ ಅಗತ್ಯವಿದೆ ಎಂದರು.

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು ನಿಮ್ಮ ಪ್ರತಿಭೆಯ ಕಾರಣಕ್ಕೆ ಇಲ್ಲಿಗೆ ಬಂದಿದ್ದೀರಿ. ಎಲ್ಲಾ ಕ್ರೀಡಾಪಟುಗಳು ಶ್ರಮವಹಿಸಿ ಇಲ್ಲಿಂದ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಬೇಕು. ನಿಮಗೆ ಒದಗಿ ಬಂದಿರುವ ಸದಾವಕಾಶವನ್ನು ಉಪಯೋಗಿಸಿಕೊಂಡು ಯಶಸ್ಸನ್ನು ಸಾಧಿಸಬೇಕು ಎಂದರು.

ಎಂಎಸ್‌ಐಎಲ್ ಅಧ್ಯಕ್ಷ ಮತ್ತು ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಹೊರಜಿಲ್ಲೆಗಳಿಂದ ಆಗಮಿಸಿರುವ ಕ್ರೀಡಾಪಟುಗಳಿಗೆ ಉತ್ತಮ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಸೂಚನೆ ನೀಡಿದ್ದೆ. ಹಿಂದಿನ ವರ್ಷದಂತೆ ಈ ವರ್ಷವೂ ಅರ್ಥಪೂರ್ಣವಾಗಿ ಜಂಪ್‌ರೋಪ್ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಂದು ಸಲಹೆ ನೀಡಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಪ್ರಸನ್ನ ಮಾತನಾಡಿ, ಇಲಾಖೆಯಿಂದ ಜಿಲ್ಲೆಯಲ್ಲಿ ಪ್ರತಿವರ್ಷವೂ ಒಂದು ಕ್ರೀಡಾಕೂಟ ನಡೆಸಲು ಅವಕಾಶ ಮಾಡಿಕೊಡುತ್ತಿದ್ದಾರೆ. 800-850 ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ (ಮುನ್ನಾ), ನಗರಸಭಾ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷೆ ಮಮತಾ ಬಾಲಸುಬ್ರಹ್ಮಣ್ಯಂ, ಸದಸ್ಯ ಎಂ.ಮಹೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಪ್ರಾಂಶುಪಾಲ ಸೋಮಣ್ಣ, ವೀಕ್ಷಕರಾದ ಗೋಪಾಲ್, ನವೀನ್ ಹಾಗೂ ಇತರರು ಉಪಸ್ಥಿತರಿದ್ದರು.

ಜಂಪ್‌ರೋಪ್ ಅಂತಾರಾಷ್ಟ್ರೀಯ ಕ್ರೀಡೆಯಾಗಿದ್ದು, ಒಲಿಂಪಿಕ್ಸ್‌ನಲ್ಲಿ ಮಾನ್ಯತೆಯನ್ನು ಪಡೆದುಕೊಂಡಿದೆ. ಜಂಪ್‌ರೋಪ್ ಕ್ರೀಡೆಗೆ ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚಿನ ಪ್ರೋತ್ಸಾಹವನ್ನು ನೀಡಲಾಗುತ್ತಿದೆ. ಬಹಳ ಉತ್ತಮ ರೀತಿಯಲ್ಲಿ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಜಿಲ್ಲೆಯ

ಬಾಳೆ ಎಲೆಯ ಊಟದ ಆತಿಥ್ಯ ವಿಶೇಷವಾಗಿದೆ. ಜಿಲ್ಲೆಯ ಪ್ರೀತಿ ವಿಶ್ವಾಸ ಮರೆಯಲು ಸಾಧ್ಯವಿಲ್ಲ.

-ಅಬ್ದುಲ್ ರಜಾಕ್, ರಾಜ್ಯಮಟ್ಟದ ಜಂಪ್‌ರೋಪ್ ಕ್ರೀಡೆಯ ಜಂಟಿ ಕಾರ್ಯದರ್ಶಿ, ಕೊಪ್ಪಳ