ಧಾರವಾಡ: ಜಿಲ್ಲಾಡಳಿತದ ವತಿಯಿಂದ ಪ್ರಾರಂಭಿಸಿರುವ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದ ಅವ್ಯವಸ್ಥೆ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಘಟನೆ ನಗರದಲ್ಲಿ ಶನಿವಾರ ನಡೆದಿದೆ.
ಇಲ್ಲಿನ ಕರ್ನಾಟಕ ವಿಶ್ವ ವಿದ್ಯಾಲಯದ ಶಾಲ್ಮಲಾ ಹಾಸ್ಟೆಲ್ನಲ್ಲಿ ಜಿಲ್ಲಾಡಳಿತ ವತಿಯಿಂದ ಸಾಂಸ್ಥಿಕ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಲಾಗಿದೆ. ಹೊರ ರಾಜ್ಯಗಳಿಂದ ಬಂದವರನ್ನು ಈ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆದರೆ, ಇಲ್ಲಿನ ಶೌಚಗೃಹ ಸ್ವಚ್ಛತೆ, ಸರಿಯಾಗಿ ನೀರಿನ ವ್ಯವಸ್ಥೆ, ಕಸ ವಿಲೇವಾರಿ ಸೇರಿ ಇತರ ಕಾರ್ಯಗಳನ್ನು ನಡೆಸುತ್ತಿಲ್ಲ ಎಂದು ಆರೋಪಿಸಿ ಕ್ವಾರಂಟೈನ್ದಲ್ಲಿರುವವರು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜವಾಗಿಲ್ಲ. ಕೂಡಲೆ ಪರಿಶೀಲಿಸುತ್ತೇವೆ ಎಂದು ಹೇಳುತ್ತಿದ್ದಾರೆ ಹೊರತು, ವ್ಯವಸ್ಥೆ ಸರಿಪಡಿಸಲು ಮುಂದಾಗುತ್ತಿಲ್ಲ. ಹೆಚ್ಚು ಪ್ರಕರಣಗಳು ದಾಖಲಾಗಿರುವ ಪ್ರದೇಶಗಳಿಂದ ಬಂದವರು ಈ ಕೇಂದ್ರದಲ್ಲಿದ್ದಾರೆ. ಇಂತಹ ಅವ್ಯವಸ್ಥೆಯಲ್ಲಿ ವೃದ್ಧರು, ಚಿಕ್ಕ ಮಕ್ಕಳು, ಗರ್ಭಿಣಿಯರು ಇರುವುದು ಅಸಾಧ್ಯ. ಹೀಗಾಗಿ ಕೂಡಲೆ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದರು.
ಊಟ ಮಾತ್ರ ಸರಿಯಾಗಿ ನೀಡುತ್ತಿದ್ದಾರೆ. ಇದನ್ನು ಬಿಟ್ಟು ಸರಿಯಾದ ನೀರು ಪೂರೈಕೆ, ಶೌಚಗೃಹ ಸ್ವಚ್ಛತೆ ಇಲ್ಲ. ಶೌಚಗೃಹಗಳನ್ನು ನಾವೇ ಸ್ವಚ್ಛ ಮಾಡಿಕೊಳ್ಳುವಂತಾಗಿದೆ. ಕ್ವಾರಂಟೈನ್ನಲ್ಲಿ ಇರುವವರಿಗೆ ಎಲ್ಲ ಸೌಲಭ್ಯ ನೀಡುತ್ತೇವೆ ಎಂದು ಹೇಳುವ ಜಿಲ್ಲಾಡಳಿತ ಈ ರೀತಿ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ ಎಂದು ಅಲ್ಲಿರುವವರು ಅಳಲು ತೋಡಿಕೊಂಡರು.
ಸ್ಥಳಕ್ಕೆ ತೆರಳಿದ ಪೊಲೀಸರು, ಬೇಡಿಕೆಗಳ ಕುರಿತು ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿ ಸಮಾಧಾನಪಡಿಸಿದರು.