ನಾಗಮಂಗಲದ ಕೆಎಸ್‌ಆರ್‌ಟಿಸಿ ಬಸ್ ಡಿಪೋದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿದರು. ಮಹೇಶ್, ಸಿದ್ದಲಿಂಗಪ್ಪ, ಅವಿನಾಶ್, ಬಸಪ್ಪ, ಚಿಕ್ಕಸ್ವಾಮಿ ಇದ್ದರು.  
ಜಿಲ್ಲೆ

ಕ್ಷಯರೋಗ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸಿ

ನಾಗಮಂಗಲ: ಕ್ಷಯ ರೋಗ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯುವುದು ಒಳಿತು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಸನ್ನ ತಿಳಿಸಿದರು.

ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ಡಿಪೋದಲ್ಲಿ ಗುರುವಾರ ತಾಲೂಕು ಮಟ್ಟದ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 2025ರ ವೇಳೆಗೆ ಕ್ಷಯರೋಗ ಮುಕ್ತ ರಾಷ್ಟ್ರ ನಿರ್ಮಾಣಕ್ಕಾಗಿ ಸಾರಿಗೆ ಇಲಾಖೆ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರ ಸಹಕಾರ ಅಗತ್ಯ. ಈ ಹಿಂದೆ ಕ್ಷಯ ರೋಗಿಗಳನ್ನು ಮನೆಯಿಂದ ಹೊರಗಿಟ್ಟು ಪ್ರತ್ಯೇಕವಾಗಿ ಉಪಚರಿಸುವ ವಾಡಿಕೆಯಿತ್ತು. ಅಂತಹ ರೋಗಿಗಳಿಗಾಗಿಯೇ ಪ್ರತ್ಯೇಕ ಆಸ್ಪತ್ರೆಗಳಿದ್ದವು. ಮೈಸೂರು ಹೊರತುಪಡಿಸಿ ಉಳಿದೆಲ್ಲ ಕಡೆ ಆಸ್ಪತ್ರೆಗಳನ್ನು ಮುಚ್ಚಲಾಗಿದೆ. ಆದರೀಗ ರೋಗಕ್ಕೆ ಶೇ.100ರಷ್ಟು ಚಿಕಿತ್ಸೆಯಿದ್ದು, ರೋಗಿಗಳ ಮನೆ ಬಾಗಿಲಿಗೆ ಬಂದು ಆರೋಗ್ಯ ಇಲಾಖೆ ಸಿಬ್ಬಂದಿ ಉಚಿತವಾಗಿ ಚಿಕಿತ್ಸೆ ನೀಡಲಿದ್ದಾರೆ ಎಂದು ಹೇಳಿದರು.

ಸಾರಿಗೆ ಸಿಬ್ಬಂದಿ ಸೇರಿದಂತೆ ವಾಹನ ಚಾಲಕರು ಮತ್ತು ಸಾರ್ವಜನಿಕರಲ್ಲಿ ರೋಗದ ಲಕ್ಷಣಗಳು ಕಂಡು ಬಂದಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಕಫ ಹಾಗೂ ಕ್ಷ-ಕಿರಣ ಪರೀಕ್ಷೆಯನ್ನು ಉಚಿತವಾಗಿ ಮಾಡಿಸಿಕೊಳ್ಳಬೇಕು. ತಾಲೂಕಿನಲ್ಲಿ ಒಟ್ಟು 80 ಜನರಿಗೆ ಸಕ್ರಿಯ ಕ್ಷಯ ರೋಗಿಗಳಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲರಿಗೂ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್ ಮಹೇಶ್, ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದಲಿಂಗಪ್ಪ ಮಾತನಾಡಿದರು. ಬಳಿಕ ಕ್ಷಯ ರೋಗ ನಿರ್ಮೂಲನೆ ಮಾಡುವ ಕುರಿತು ಜನಜಾಗೃತಿ ಮೂಡಿಸುವ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು. ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಬಸಪ್ಪ, ಕ್ಷಯರೋಗ ಸಂರ್ದಶಕ ಕೆ.ಟಿ.ಅವಿನಾಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಚಿಕ್ಕಸ್ವಾಮಿ ಇತರರಿದ್ದರು.