ಜಿಲ್ಲೆ

ಖಾಸಗಿ ಶಾಲೆಗಳು ಮತ್ತು ಶಿಕ್ಷಕರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆಗೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ

ಚಿಕ್ಕಬಳ್ಳಾಪುರ: ಕರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಆರ್ಥಿಕವಾಗಿ ನಷ್ಟ ಅನುಭವಿಸುತ್ತಿರುವ ಖಾಸಗಿ ಶಾಲೆಗಳು ಮತ್ತು ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿ ಖಾಸಗಿ ಶಿಕ್ಷಣ ಸಂಸ್ಥೆಯಿಂದ ಜಿಲ್ಲಾಡಳಿತ ಭವನದ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಿಂದ ಜಿಲ್ಲಾಡಳಿತ ಭವನದವರೆಗೂ ಕಾಲ್ನಡಿಗೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಶಿಕ್ಷಣ ಸಂಸ್ಥೆಗಳ ಮಾಲೀಕರು ಮತ್ತು ಶಿಕ್ಷಕರು ಜಿಲ್ಲಾಧಿಕಾರಿ ಆರ್.ಲತಾ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಮಾತನಾಡಿ, ಶಾಲೆಗಳನ್ನು ಪ್ರಾರಂಭಿಸಲು ಕರೊನಾ ಅಡ್ಡಿ. ಆದರೆ, ಬಾರ್‌ಗಳನ್ನು ತೆರೆದರೆ ಸೋಂಕು ಹರಡುವುದಿಲ್ಲ ಎಂಬ ಧೋರಣೆಯನ್ನು ಸರ್ಕಾರ ಹೊಂದಿರುವುದು ದುರದೃಷ್ಟಕರ. 9 ತಿಂಗಳಿಂದಲೂ ಸಂಬಳ ಇಲ್ಲದೇ ಶಿಕ್ಷಕರು ಬೋಧನಾ ವೃತ್ತಿ ಬಿಟ್ಟು ಪರ್ಯಾಯ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವರು ಬೀದಿಬದಿ ವ್ಯಾಪಾರ ನೆಚ್ಚಿಕೊಂಡಿದ್ದಾರೆ. ಇದನ್ನು ನಿರ್ಲಕ್ಷಿಸಿದಲ್ಲಿ ಮುಂಬರುವ ದಿನಗಳಲ್ಲಿ ಒಳ್ಳೆಯ ಶಿಕ್ಷಕರು ಸಿಗುವುದು ಕಷ್ಟವಾಗುತ್ತದೆ ಎಂದರು.

ಶಿಕ್ಷಣ ಸಂಸ್ಥೆಗಳು ನಷ್ಟದಿಂದ ಬಾಗಿಲು ಮುಚ್ಚುತ್ತಿವೆ. ತರಗತಿಗಳಿಲ್ಲದ ಹಿನ್ನೆಲೆಯಲ್ಲಿ ಬಾಲ್ಯ ವಿವಾಹ, ಬಾಲ ಕಾರ್ಮಿಕ ಸೇರಿ ಸಾಮಾಜಿಕ ಪಿಡುಗುಗಳು ಹೆಚ್ಚಾಗುತ್ತಿವೆ. ಇದರಿಂದ ಸಮಾಜದಲ್ಲಿ ನಕಾರಾತ್ಮಕ ವಾತಾವರಣ ನಿರ್ಮಾಣವಾಗುತ್ತಿದೆ. ಶಿಕ್ಷಣ ಸಚಿವರು ಖಾಸಗಿ ಶಾಲೆಗಳು ಮತ್ತು ಶಿಕ್ಷಕರ ಹಿತವನ್ನು ಕಡೆಗಣಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಖಾಸಗಿ ಶಾಲೆ ಪ್ರಾಂಶುಪಾಲ ಹೆನ್ರಿ ಪ್ರಸನ್ ಕುಮಾರ್ ಮಾತನಾಡಿ, ಶಾಲಾ ಬಜೆಟ್ ಮತ್ತು ನಿರ್ವಹಣೆ ವೆಚ್ಚ ಹೊರೆಯ ನಡುವೆ ಪಾಲಕರು ಕರೊನಾ ಹೆಸರಿನಲ್ಲಿ ಶುಲ್ಕ ಪಾವತಿಸಲು ಹಿಂದೇಟು ಹಾಕುತ್ತಿರುವುದರಿಂದ ತೊಂದರೆ ಅನುಭವಿಸುವಂತಾಗಿದೆ. ಇದಕ್ಕೆ ಖಾಸಗಿ ಶಾಲೆಗಳು ಮತ್ತು ಶಿಕ್ಷಕರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಒತ್ತಾಯಿಸಿದರು.