ಬೆಳಗಾವಿ: ಗಣರಾಜ್ಯೋತ್ಸವ ದಿನವನ್ನು ಸಡಗರ-ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಸಮಿತಿ ರಚಿಸಲಾಗಿದೆ. ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ 9 ಗಂಟೆಯೊಳಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಎಲ್ಲ ಇಲಾಖೆ ಅಧಿಕಾರಿ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರುವಂತೆ ತಿಳಿಸಿದರು.
ಎಲ್ಲ ಸಿದ್ಧತೆ ಸಮಪರ್ಕವಾಗಿ ನಿರ್ವಹಿಸಿ: ಕಾರ್ಯಕ್ರಮದ ದಿನದಂದು ಜರುಗಲಿರುವ ಪಥ ಸಂಚಲನ, ಧ್ವಜಾರೋಹಣ ಸೇರಿ ಎಲ್ಲ ಸಿದ್ಧತೆ ಸಂಬಂಧಿಸಿದ ಇಲಾಖೆಗಳು ಸಮರ್ಪಕವಾಗಿ ನಿರ್ವಹಿಸಬೇಕು. ಗಣರಾಜ್ಯೋತ್ಸವದ ಪ್ರಯುಕ್ತ ನಗರದ ಪ್ರಮುಖ ವೃತ್ತಗಳನ್ನು ಸ್ವಚ್ಛಗೊಳಿಸಿ ದೀಪಾಲಂಕಾರ ಮಾಡುವಂತೆ ತಿಳಿಸಿದರು.
ಪ್ಲಾಸ್ಟಿಕ್ ಧ್ವಜ, ಬಂಟಿಂಗ್ಸ್ ನಿಷೆೇಧ: ಗಣರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ಲಾಸ್ಟಿಕ್ ಧ್ವಜ ಹಾಗೂ ಬಂಟಿಂಗ್ಸ್ ಮಾರಾಟ ಹಾಗೂ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿಯೂ ಪ್ಲಾಸ್ಟಿಕ್ ಧ್ವಜ ಹಾಗೂ ಬಂಟಿಂಗ್ಸ್ ಬಳಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಪಂ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಮಾತನಾಡಿ, ಗಣರಾಜ್ಯೋತ್ಸವ ದಿನವನ್ನು ಜಿಲ್ಲೆಯ ಎಲ್ಲ ಗ್ರಾಪಂ ಹಾಗೂ ತಾಲೂಕು ಕಚೇರಿಗಳಲ್ಲಿ ಶಿಷ್ಟಾಚಾರದನ್ವಯ ಕಾರ್ಯಕ್ರಮ ಆಯೋಜಿಸಲು ಸೂಚನೆ ನೀಡಲಾಗುವುದು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೆಶಕ ಶಿವನಗೌಡ ಪಾಟೀಲ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಲ್ಲಿಕಾರ್ಜುನ ಕಲಾದಗಿ, ಕ್ರೀಡಾ ಇಲಾಖೆ ಉಪನಿರ್ದೆಶಕ ಬಿ.ಶ್ರೀನಿವಾಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೆಶಕಿ ವಿದ್ಯಾವತಿ ಭಜಂತ್ರಿ, ಶ್ರೀನಿವಾಸ ತಾಳೂಕರ, ಆನಂದ ಲೋಕರಿ ಇತರರಿದ್ದರು.