ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಗಾಂಧಿ ಭವನವನ್ನು ನವೀಕರಣ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನ ಉಪಾಧ್ಯಕ್ಷ ಪ್ರೊ.ಎಸ್.ಆರ್.ನಿರಂಜನ್ ಹೇಳಿದರು.
ಗಾಂಧಿ ಅಧ್ಯಯನ ಕೇಂದ್ರ ಹಾಗೂ ಶೇಷಾದ್ರಿಪುರಂ ಪದವಿ ಕಾಲೇಜು ಸಹಯೋಗದಲ್ಲಿ ಗುರುವಾರ ಮಾನಸಗಂಗೋತ್ರಿಯ ಗಾಂಧಿ ಭವನದಲ್ಲಿ ಆಯೋಜಿಸಿದ್ದ 77ನೇ ಸರ್ವೋದಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈಗಾಗಲೇ ಗಾಂಧಿ ಭವನ ನಿರ್ಮಾಣವಾಗಿ ಬಹಳ ವರ್ಷಗಳು ಕಳೆದಿದ್ದು, ಇದನ್ನು ನವೀಕರಣ ಮಾಡಬೇಕು. ಈ ಕೆಲಸಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಕೊಡಿಸಲು ಪ್ರಯತ್ನಿಸಲಾಗುವುದು ಎಂದರು.
ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷವಾಗಿದೆ. ಈ ಸಂದರ್ಭದಲ್ಲಿ ಗಾಂಧೀಜಿ ಅವರ ವಿಚಾರಧಾರೆಯನ್ನು ಜನತೆಗೆ ತಿಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು 100 ಕೋಟಿ ರೂ. ಕಾರ್ಯಕ್ರಮ ರೂಪಿಸಿದ್ದು, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಅಧ್ಯಕ್ಷತೆಯಲ್ಲಿ 30 ತಜ್ಞರ ಸಮಿತಿ ರಚಿಸಲಾಗಿದೆ ಎಂದರು.
ಕಾರ್ಯಕ್ರಮಗಳ ಪಟ್ಟಿಯನ್ನು ಈಗಾಗಲೇ ವಿಶ್ವವಿದ್ಯಾಲಯ ಸೇರಿದಂತೆ ಹಲವು ಇಲಾಖೆಗಳಿಗೆ ಕಳುಹಿಸಲಾಗಿದೆ. ಇದರ ಪ್ರಕಾರ ರಾಜ್ಯದ ಪ್ರತಿ ವಿಶ್ವವಿದ್ಯಾಲಯದಲ್ಲಿ ಗಾಂಧಿ ಭವನ ನಿರ್ಮಾಣ ಮಾಡಬೇಕು. ಜತೆಗೆ ಉನ್ನತ ಶಿಕ್ಷಣ ಇಲಾಖೆ ಮೂಲಕ ಕೂಡ ಅನೇಕ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದರು.
ಗಾಂಧೀಜಿ ಪ್ರಸ್ತುತತೆ ಕುರಿತು ನಿವೃತ್ತ ಕನ್ನಡ ಪ್ರಾಧ್ಯಾಪಕಿ ಪ್ರೊ.ಎಚ್.ಜೆ.ಸರಸ್ವತಿ ಉಪನ್ಯಾಸ ನೀಡಿದರು. ಮಹಿಳಾ ಪೌರಕಾರ್ಮಿಕರಾದ ಯಶೋದಾ ಅವರನ್ನು ಸನ್ಮಾನಿಸಲಾಯಿತು. ಕುಲಸಚಿವೆ ಎಂ.ಕೆ.ಸವಿತಾ, ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಎನ್.ನರೇಂದ್ರಕುಮಾರ್, ಶೇಷಾದ್ರಿಪುರಂ ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಕೆ.ಸೌಮ್ಯಾ ಈರಪ್ಪ, ಕಾಲೇಜಿನ ಗಾಂಧಿ ಅಧ್ಯಯನ ಕೇಂದ್ರದ ಪ್ರೊ.ಕೃಪಲಾನಿ ಸೇರಿದಂತೆ ಇತರರಿದ್ದರು.