ಮದ್ದೂರು: ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಗೃಹಲಕ್ಷ್ಮೀ ಯೋಜನೆಯ ಕಾರ್ಯಕ್ರಮಕ್ಕೆ ತೆರಳುವ ವಾಹನಗಳಿಗೆ ಬುಧವಾರ ಪಟ್ಟಣದ ಪುರಸಭೆಯ ಆವರಣದಲ್ಲಿ ಶಾಸಕ ಕೆ.ಎಂ.ಉದಯ್ ಚಾಲನೆ ನೀಡಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇತರರು ಚಾಲನೆ ನೀಡುತ್ತಿದ್ದು, ಕ್ಷೇತ್ರಾದ್ಯಂತ ಸಾವಿರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ 3 ತಿಂಗಳಲ್ಲಿ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದಂತೆ 5 ಗ್ಯಾರಂಟಿ ಯೋಜನೆಗಳಲ್ಲಿ 4 ಯೋಜನೆಗಳನ್ನು ಜಾರಿಗೆ ತಂದಿದ್ದು, ಇನ್ನುಳಿದ ಯುವನಿಧಿ ಯೋಜನೆಯನ್ನು ಶೀಘ್ರವಾಗಿ ಜಾರಿಗೆ ತರಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರಗಳಲ್ಲಿ ಘೋಷಣೆ ಮಾಡಿದಂತೆ ಭರವಸೆಗಳನ್ನು ಈಡೇರಿಸಿದ ಸರ್ಕಾರವೆಂದರೆ ಎಂದರೆ ಕಾಂಗ್ರೆಸ್ ಸರ್ಕಾರ ಮಾತ್ರ. ಮುಂದಿನ ದಿನಗಳಲ್ಲಿ ಮತ್ತಷ್ಟು ಜನಪರ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಜನರ ಜೀವನ ಮಟ್ಟವನ್ನು ಸುಧಾರಿಸಲು ಅಗತ್ಯ ಯೋಜನೆಗಳನ್ನು ರೂಪಿಸಲಾಗುವುದು ಎಂದು ವಿಶ್ವಾಸ ನೀಡಿದರು.
ರಾಜ್ಯದ ರೈತರ ಹಿತ ಕಾಪಾಡಲಿ: ಕೆಆರ್‌ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾನೂನು ರೀತಿಯ ಹೋರಾಟ ಮಾಡುವ ಮೂಲಕ ರಾಜ್ಯದ ರೈತರ ಹಿತ ಕಾಪಾಡಬೇಕೆಂದು ಶಾಸಕ ಕೆ.ಎಂ.ಉದಯ್ ಒತ್ತಾಯಿಸಿದರು.
ನಮಗೆ ರಾಜ್ಯದ ರೈತರ ಹಿತ ಮುಖ್ಯವಾಗಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ನಾವು ಕೂಡ ಸರ್ಕಾರದ ಮಟ್ಟದಲ್ಲಿ ಒತ್ತಡ ಹೇರುವ ಮೂಲಕ ರಾಜ್ಯದ ರೈತರ ಪರ ನಿಲ್ಲುತ್ತೇನೆ ಎಂದು ತಿಳಿಸಿದರು.