ಮೈಸೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 2 ಸಾವಿರ ರೂ. ಪಾವತಿ ವಿಳಂಬವನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಗಾಂಧಿ ವೃತ್ತದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗೃಹಲಕ್ಷ್ಮಿಹಣ ಫಲಾನುಭವಿ ಮಹಿಳೆಯರಿಗೆ ಪ್ರತಿ ತಿಂಗಳು ಸಂದಾಯವಾಗುತ್ತಿಲ್ಲ. ಇದರಿಂದ ಸಮಸ್ಯೆ ಸಿಲುಕಿರುವ ಅವರು, ಈ ಹಣದ ನಿರೀಕ್ಷೆಯಲ್ಲಿದ್ದಾರೆ. ಕೂಡಲೇ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಹಣವನ್ನು ಜಮೆ ಮಾಡಬೇಕೆಂದು ಒತ್ತಾಯಿಸಿದರು.
ಸ್ಥಳೀಯ ಸಂಸ್ಥೆಗಳಾದ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಚುನಾವಣೆಯನ್ನು ಶೀಘ್ರ ನಡೆಸಬೇಕು ಎಂದು ಒತ್ತಾಯಿಸಿದರು.
ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಸಕಾಲದಲ್ಲಿ ಸಾರಿಗೆ ಬಸ್ ಸಿಗದೆ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ ಸೌಕರ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಮಾಜಿ ಶಾಸಕರಾದ ಕೆ.ಮಹದೇವು, ಅಶ್ವಿನ್‌ಕುಮಾರ್, ಜೆಡಿಎಸ್ ನಗರಾಧ್ಯಕ್ಷ ಕೆ.ಟಿ. ಚೆಲುವೇಗೌಡ, ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ನಗರ ಹಿರಿಯ ಉಪಾಧ್ಯಕ್ಷ ಫಾಲ್ಕನ್ ಬೋರೇಗೌಡ, ಮಾಜಿ ಮೇಯರ್ ಆರ್.ಲಿಂಗಪ್ಪ ಇತರರಿದ್ದರು.