ನಂಜನಗೂಡು: ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ತಾಲೂಕಿನ ಗೋಳೂರು ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿದರು.
ಚಾಮರಾಜನಗರ ಮುಖ್ಯರಸ್ತೆಯಲ್ಲಿ ಸಂಘಟಿತರಾದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಗೋಳೂರು ಮಹದೇವಸ್ವಾಮಿ ಮಾತನಾಡಿ, ರಾಜ್ಯಾದ್ಯಂತ 40 ಲಕ್ಷ ಉಪ್ಪಾರರಿದ್ದು, 2023ರ ವಿಧಾನಸಭಾ ಚುನಾವಣೆಯಲ್ಲಿ ಒಮ್ಮತದಿಂದ ಕಾಂಗ್ರೆಸ್ ಬೆಂಬಲಿಸಿದ ಕಾರಣದಿಂದಾಗಿ ಪಕ್ಷ ಬಹುಮತ ಪಡೆಯಲು ಸಾಧ್ಯವಾಗಿದೆ. ಶಾಸಕ ಪುಟ್ಟರಂಗಶೆಟ್ಟಿ ಅವರು ಸಮುದಾಯದ ರಾಜ್ಯಾಧ್ಯಕ್ಷರಾಗಿ ಸಮಾಜವನ್ನು ಒಗ್ಗೂಡಿಸಿ ಕಾಂಗ್ರೆಸ್ ಪಕ್ಷದ ಪರವಾಗಿ ಮತ ಹಾಕಿಸುವಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಆದರೆ ಕೊನೇ ಘಳಿಗೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡದೆ ವಂಚಿಸುತ್ತಿರುವುದು ಖಂಡನೀಯ. ಮುಂಬರುವ ತಾಪಂ ಮತ್ತು ಜಿಪಂ ಹಾಗೂ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಸಮುದಾಯದ ನಾಯಕರಾದ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಉಪ್ಪಾರ ಸಂಘದ ಮಾಜಿ ಅಧ್ಯಕ್ಷ ಕೃಷ್ಣ ಮಾತನಾಡಿ, ಹಲವಾರು ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿರುವ ಉಪ್ಪಾರ ಜನಾಂಗಕ್ಕೆ ಈ ಬಾರಿ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡದಿರುವುದು ಖಂಡನೀಯ. ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ರಮವಹಿಸಿ ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮುದ್ದುಮಾದಶೆಟ್ಟಿ, ಚಿನ್ನುಕೃಷ್ಣ, ಮಣಿಕಂಠ, ನಂಜಪ್ಪ, ಚಿಕ್ಕಣ್ಣ, ರಮೇಶ್, ರವಿ, ಮಂಜುನಾಥ್, ಕುಮಾರ್, ರಾಮು, ನಂಜುಂಡಸ್ವಾಮಿ, ಗಣೇಶ್, ಅರುಣ್ ಸೇರಿದಂತೆ ಹಲವಾರು ಪ್ರಮುಖರು ಭಾಗವಹಿಸಿದ್ದರು.